ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣ ಅವರ ನಡುವಿನ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇಬ್ಬರೂ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಮುಖ್ಯಮಂತ್ರಿ ವಿಚಾರ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಪುನರುಚ್ಚರಿಸಿದರು. ಇದೇ ವೇಳೆ, ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.
ವಿಧಾನ ಪರಿಷತ್ತಿನ ಸದಸ್ಯರ ನಾಮ ನಿರ್ದೇಶನ ಕುರಿತ ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲ, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿ ಖಾತಾ ಅಭಿಯಾನಕ್ಕೆ ಸೂಚನೆ: ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ಆಸ್ತಿಗಳಿಗೆ ಇ - ಖಾತಾ ಮಾಡುವುದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು?; ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ
ಇದನ್ನೂ ಓದಿ: ರಾಜ್ಯದಲ್ಲಿ ಇನ್ಮುಂದೆ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ