ವಿಜಯನಗರ: "ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಬಗ್ಗೆ ನನಗೆ ಈಗಷ್ಟೇ ಮಾಹಿತಿ ಬಂತು. ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಹಿಂದೂಪರ ಸಂಘಟನೆಗಳು ರಾಜಕೀಯಕ್ಕಾಗಿ ಈ ವಿಚಾರದ ಕುರಿತು ಪ್ರತಿಭಟನೆ ಮಾಡಬಾರದು" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಜಯನಗರದಲ್ಲಿಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, "ಹಸುಗಳ ಕೆಚ್ಚಲು ಕೊಯ್ದಿರುವುದು ತಪ್ಪು. ಇದನ್ನು ಯಾರು ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಮಾತನಾಡಿದ್ದೇನೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಹೇಳಿದ್ದೇನೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ" ಎಂದು ಹೇಳಿದರು.
ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ: ಹಸುವಿನ ಕೆಚ್ಚಲು ಕೊಯ್ದ ಕಿಡಿಗೇಡಿಗಳ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸುಗಳ ಮಾಲೀಕ ಕರ್ಣ ನೀಡಿದ ದೂರಿನನ್ವಯ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಪ್ರದೇಶದ ಸಿಸಿಟಿವಿ ಪರಿಶೀಲನೆ ನಡೆಸಿರುವ ಪೊಲೀಸರು, ಸ್ಥಳಿಯರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಇಂದು ಬೆಳಗಿನ ಜಾವ ನಡೆದಿತ್ತು. ಹಸುಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಘಟನಾ ಸ್ಥಳಕ್ಕೆ ಆಗಮಿಸಿ ಆರೋಪಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಗಾಗಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಕಾಟನ್‌ಪೇಟೆ ಠಾಣೆ ಪೊಲೀಸ್ ಸಿಬ್ಬಂದಿ, ಚಿಕ್ಕಪೇಟೆ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಎಂದು ಆಚರಣೆ ಮಾಡುಲಾಗುವುದು ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಹಸುಗಳ ಮೇಲಿನ ಅಮಾನವೀಯ ಕೃತ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ. ಮೊನ್ನೆಯಷ್ಟೇ ಗೋ ಶಾಲೆಗಳನ್ನು ಮುಚ್ಚುವ ನಿರ್ಧಾರ ಪ್ರಕಟಿಸಿದೆ. ಇದೆಲ್ಲವೂ ಗೋ ಭಕ್ಷಕ ಜನರ ಓಲೈಕೆಗಾಗಿ ಅಲ್ಲದೆ ಬೇರೇನೂ ಅಲ್ಲ ಎಂದು ವಿಜಯೇಂದ್ರ ದೂರಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಪಾಪಿಗಳು! ರಸ್ತೆಯಲ್ಲಿ ರಕ್ತದೋಕುಳಿ, ಮೂಕಪ್ರಾಣಿಗಳ ನರಳಾಟಕ್ಕೆ ಸ್ಥಳೀಯರ ಕಣ್ಣೀರು
ಇದನ್ನೂ ಓದಿ: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಣೆ : ಆರ್.ಅಶೋಕ್