ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಸುವರ್ಣಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಸಿಎಂ, ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.
ಎಂಇಎಸ್ (MES - Maharashtra Ekikaran Samiti) ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದು ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯ, ಕೇಂದ್ರಾಡಳಿತ ಪ್ರದೇಶ ಮಾಡಿ: ಆದಿತ್ಯ ಠಾಕ್ರೆ
ಮುಂಬೈನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉದ್ಧವ್ ಠಾಕ್ರೆ ಬಣದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ಬೆಳಗಾವಿಯಲ್ಲಿ ಅತೀ ಹೆಚ್ಚು ಮರಾಠಿ ಮಾತನಾಡುವ ಜನರಿಗೆ ಅನ್ಯಾಯವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯ ಸಂಭ್ರಮಾಚರಣೆ ನಡೆಯುತ್ತಿದೆ. ಅತ್ತ, ನೆರೆಯ ರಾಜ್ಯದ ಬೆಳಗಾವಿಯಲ್ಲಿ ನಮ್ಮವರ ಪರಿಸ್ಥಿತಿ ಹದಗೆಡುತ್ತಿದೆ. ಹಾಗಾಗಿ ಅತೀ ಹೆಚ್ಚು ಮರಾಠಿ ಭಾಷಿಕರನ್ನು ಹೊಂದಿರುವ ಕರ್ನಾಟಕದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು. ಈ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.