ಹಾಸನ: ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ದೊಡ್ಡತಪ್ಪಲಿನಲ್ಲಿ ಗುಡ್ಡ ಕುಸಿಯಲು ಪ್ರಮುಖ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಎನ್.ಎಚ್.ಎ.ಐ.ಪ್ರಾಧಿಕಾರದ ಅಧಿಕಾರಿಗಳಿಗೆ ಚಾಟಿ ಬೀಸಿದರು.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿಯ ಶಿರಾಡಿ ಘಾಟ್ ಮಾರ್ಗದ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದ್ದಾರೆ. ಇದೂ ಕೂಡ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು.
ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಕೇಳಿದ ಪ್ರಶ್ನೆಗಳಿವು:
1. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?
2. ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?
3. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. ಸಿಎಂ ಸೂಚಿಸಿದ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಿಎಂಗೆ ವಿವರಿಸುತ್ತಾ, ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10ಕಿ.ಮೀ ಬಾಕಿ ಇದೆ. ಅದರೆ ಇಲ್ಲಿಯವರೆಗೂ ಎಷ್ಟು ತಡೆಗೋಡೆಗಳನ್ನು ನಿರ್ಮಿಸಿದ್ದಾರೆ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ ಎಂದು ವಿವರಿಸಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು. ಬಿಜೆಪಿಯವರದ್ದು 40% ಭ್ರಷ್ಟಾಚಾರ ಎಂದು ಕೆಂಪಣ್ಣ ಆರೋಪ ಮಾಡಿದ್ದರು. ಹಾಗಾಗಿ ಈ ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರಾದರೂ ಇದ್ದರೇ ಅದು ಬಿಜೆಪಿಯವರೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿಗೆ ಟಾಂಗ್: ಇನ್ನೂ ಹತ್ತು ತಿಂಗಳು ಮಾತ್ರ ಸರ್ಕಾರ ಇರುತ್ತೆ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ ಮಾತನಾಡಿ, ಕುಮಾರಸ್ವಾಮಿ ಎಷ್ಟು ದಿನ ಮಂತ್ರಿಯಾಗಿರುತ್ತಾರೆ ಗೊತ್ತಾ..? ನಮಗೆ 136 ಸೀಟ್ ಆಶೀರ್ವಾದ ಮಾಡಿದ್ದಾರೆ. ಜೆಡಿಎಸ್ 19 ಸೀಟ್ ಮಾತ್ರ ಗೆದ್ದಿದೆ. ಕುಮಾರಸ್ವಾಮಿ ಅವರಿಗೆ ಇದು ನೆನಪು ಇದೆಯಾ ಎಂದು ಪ್ರಶ್ನೆ ಮಾಡಿದರು.
ಹಾಸನದಲ್ಲಿ ಇವರ ಕುಟುಂಬದವರು ಆಳ್ವಿಕೆ ಮಾಡುತ್ತಿದ್ದರು. ಈಗ ಹಾಸನದಲ್ಲಿ ಎಂಪಿ ಗೆದ್ದಿರುವವರು ಯಾರು.. ಮೊದಲು ಪಕ್ಷವನ್ನು ಸಂಘಟನೆ ಮಾಡೊದಿಕ್ಕೇಳಿ ಅವರಿಗೆ ಎಂದು ಸಿಎಂ ತಿರುಗೇಟು ನೀಡಿದರು. ಇನ್ನು ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಾಗಿ ಮಾತನಾಡಿ ಸಿಎಂ, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ಅವರಿಗೆ ಮಾತನಾಡಲು ನೈತಿಕತೆ ಇದೆಯೇ..? ಅವರ ಕಾಲದ ಎಲ್ಲಾ ಹಗರಣಗಳನ್ನು ಬಯಲಿಗೆಳೆಯುತ್ತೇವೆ ನೋಡಿ. ಈಗಾಗಲೇ ಸಭೆಗಳನ್ನು ಆರಂಭಿಸಿದ್ದೇವೆ. ರಾಮನಗರ, ಚನ್ನಪಟ್ಟಣದಲ್ಲಿ ಸಭೆ ಮಾಡಿದ್ದೇವೆ. ಆ.9 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ ಎಂದರು.
ಇನ್ನು ಯಡಿಯೂರಪ್ಪ ಬಗ್ಗೆ ಮಾತನಾಡಿ, ಬಿಜೆಪಿ ಮತ್ತು ಅವರ ಕಾಲದ ಎಲ್ಲಾ ಹಗರಣಗಳನ್ನು ಬಿಚ್ಚಿಡುತ್ತೇವೆ ಎಂದು ಯಡಿಯೂರಪ್ಪ ಅವರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈಗಾಗಲೇ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಅಲ್ವಾ. ಅವರು ರಾಜಕೀಯದಲ್ಲಿ ಇರಲು ನಾಲಾಯಕ್ ಎಂದು ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡರು.