ಬೆಂಗಳೂರು: "ಸಚಿವ ಸಂಪುಟ ಪುನಾರಚನೆ ವಿಚಾರ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಸದ್ಯಕ್ಕೆ ಪ್ರಸ್ತಾವನೆ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ, ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಸಚಿವರ ಆತಂಕಕ್ಕೆ ಕಾರಣವಾಗಿತ್ತು.
ಸಚಿವರ ಕಾರ್ಯನಿರ್ವಹಣೆ ಆಧಾರದಲ್ಲಿ ಹೈಕಮಾಂಡ್ ಸಂಪುಟ ಪುನಾರಚನೆಗೆ ಸಮ್ಮತಿಸುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿತ್ತು. ಇತ್ತ ಕೆಲವರಲ್ಲಿ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕವೂ ಮೂಡಿತ್ತು. ಕೆಲ ಹಿರಿಯ ಸಚಿವರೂ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದರು.
ವಿವಾದ, ಭ್ರಷ್ಟಾಚಾರ ಆರೋಪಕ್ಕೊಳಗಾದ ಸಚಿವರು, ದಕ್ಷತೆ ಇಲ್ಲದ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಸಹದ್ಯೋಗಿಗಳಿಗೆ ಸಂಪುಟ ಪುನಾರಚನೆಯ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಪಸಮರದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೀರಿ. ನಿಮಗೆಲ್ಲರಿಗೂ ಅಭಿನಂದನೆಗಳು. ಸಂಪುಟ ಪುನಾರಚನೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಸುಳ್ಳು ಬರುತ್ತಿದೆ. ಅಂತಹ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಸಂಪುಟ ಸಭೆಯಲ್ಲಿ 9 ವಿಧೇಯಕಗಳಿಗೆ ಅನುಮೋದನೆ: ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಮಸೂದೆ ಮಂಡನೆಗೆ ಅಸ್ತು