ಮಂಗಳೂರು (ದಕ್ಷಿಣ ಕನ್ನಡ): ಕ್ರೀಡಾಪಟುಗಳು, ಕೋಚ್ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಲಿ. ನಾನು ಕೊಡ್ತೀನಿ. ಆದರೆ ರಾಜ್ಯದ ಕ್ರೀಡಾಪಟುಗಳು ಒಳ್ಳೆಯ ರಿಸಲ್ಟ್ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಕರ್ನಾಟಕ ಕ್ರೀಡಾಕೂಟ 2025''ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಗತ್ಯ ವೇದಿಕೆಗಳು ಮತ್ತು ಉತ್ತಮ ಪ್ರೋತ್ಸಾಹಗಳು ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯಿತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಮುಂದಿನ ಬಜೆಟ್ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂಪಾಯಿ ನಿಗದಿ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ. 2ರಷ್ಟು ಉದ್ಯೋಗಗಳನ್ನ ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇ.3 ರಷ್ಟು ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲಿಡಲಾಗುವುದು ಎಂದು ಭರವಸೆ ನೀಡಿದರು.
ಒಲಿಂಪಿಕ್ಸ್ನಲ್ಲಿ ಪದಕ ತಂದವರಿಗೆ 6 ಕೋಟಿ ರೂಪಾಯಿ ಕೊಡುತ್ತೇವೆ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.
ವಿಧಾನಸಭಾ ಅಧ್ಯಕ್ಷ ಯು. ಟಿ ಖಾದರ್, ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಪ್ರದಾನ!
ಇದನ್ನೂ ಓದಿ: ಸಂಸದೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್!: ಸತ್ಯಾಸತ್ಯತೆ ಏನು?