ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು (ಶನಿವಾರ) ಹಾಜರಾಗುತ್ತಿದ್ದಾರೆ.
ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ.
ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್ 2023ರ ಮೇ 5ರಂದು 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಎಲ್ಲಾ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ಪ್ರಕಟಿಸಿತ್ತು. ಅಲ್ಲದೇ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ. 75-30% ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ನ (ಬಿಜೆಪಿ) ಸರ್ಕಾರವು 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಡಬಲ್ ಎಂಜಿನ್ ಸರ್ಕಾರಕ್ಕೆ ಬದಲಾಗಿ, ಟ್ರಬಲ್ ಎಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಹಾನಿ ಮಾಡಿ, ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರು ನೇರ ಕಾರಣವಾಗಿದ್ದಾರೆ ಎಂದು ಬಿಜೆಪಿ ದೂರಿತ್ತು.
ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ (ಈಗಿನ ಎಕ್ಸ್) ಖಾತೆಯಲ್ಲಿ ಈ ಸುಳ್ಳು ಜಾಹೀರಾತನ್ನು ಹಂಚಿಕೊಂಡು ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ, ಕಾಂಗ್ರೆಸ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯು ಖಾಸಗಿ ದೂರು ದಾಖಲಿಸಿತ್ತು. ಇದರ ಸಂಜ್ಞೇ ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಫೆಬ್ರವರಿ 23ರಂದು ಮಾನಹಾನಿ ದಾವೆ ದಾಖಲಿಸಲು ಆದೇಶಿಸಿ, ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಸಮನ್ಸ್ ಅನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿಸದ ಹಿನ್ನೆಲೆಯಲ್ಲಿ ಮರು ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ - Court denied anticipatory bail