ರಾಮನಗರ: ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿರುವೆ, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಕನಕಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಅನ್ಯ ಪಕ್ಷಗಳಿಂದ ಸಾವಿರಾರು ಕಾರ್ಯಕರ್ತರು ಸೇರ್ಪಡೆಗೊಳ್ಳುತ್ತಿದ್ದಾರೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ನ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಗುರುವಾರ 11 ಗಂಟೆಗೆ ನಾಮಪತ್ರ ಸಲ್ಲಿಕೆ: ನಾಮಪತ್ರ ಸಲ್ಲಿಕೆ ವಿಚಾರ ಕುರಿತಾಗಿ ಮಾತನಾಡಿ, ನಾಳೆ ಬೆಳಗ್ಗೆ ಗುರುವಾರ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದರು.
ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ: ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಮಾಧ್ಯಮದವರ ಪ್ರಶ್ನೆಗೆ, ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ಸಂಸದ ಡಿ ಕೆ ಸುರೇಶ್ ತಿಳಿಸಿದರು.
ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ಮರಳೆಗವಿಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದರು. ನಂತರ ದೊಡ್ಡ ಆಲಹಳ್ಳಿ ಗ್ರಾಮಕ್ಕೆ ತೆರಳಿ ತಾಯಿ ಗೌರಮ್ಮ ದೇವಿ ಅವರ ಆಶೀರ್ವಾದ ಪಡೆದರು.
ಇದನ್ನೂಓದಿ:ಕೋಲಾರ ಟಿಕೆಟ್ ಕಗ್ಗಂಟು: ರಾತ್ರಿ ಅಸಮಾಧಾನಿತರ ಸಭೆ ಕರೆದ ಸಿಎಂ, ಡಿಸಿಎಂ - Kolar Ticket Controversy