ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದೆ. ಅದಕ್ಕೂ ಮುನ್ನ ರಾಮನಗರದಲ್ಲಿ ಕ್ಷೇತ್ರದ ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಬಂದರು.
ಬೃಹತ್ ರೋಡ್ ಶೋ ಬಳಿಕ ಕೈ ಅಭ್ಯರ್ಥಿ ಡಿಕೆ ಸುರೇಶ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಡಿಸಿ ಅವಿನಾಶ್ ಮೆನನ್ ರಾಜೇಂದ್ರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಹಚ್ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆ ನಡೆಸಲಾಯಿತು. ತೆರೆದ ವಾಹನದಲ್ಲಿ ಅಭ್ಯರ್ಥಿ ಡಿಕೆ ಸುರೇಶ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಇದಕ್ಕೂ ಮುನ್ನ ಸಹೋದರ ಡಿಕೆ ಶಿವಕುಮಾರ್ ಹಾಗೂ ಅತ್ತಿಗೆ ಉಷಾ ಶಿವಕುಮಾರ್ ಅವರಿಂದ ಡಿಕೆ ಸುರೇಶ್ ಆಶೀರ್ವಾದ ಕೂಡ ಪಡೆದರು.
ಈ ಕ್ಷೇತ್ರದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ.ಮಂಜುನಾಥ್ ಕಣಕ್ಕಿಳಿದಿದ್ದಾರೆ. ಇದರಿಂದಾಗಿ ಡಿಕೆ ಸುರೇಶ್ ಮತ್ತು ಡಾ.ಮಂಜುನಾಥ್ ನಡುವೆ ನೇರಾನೇರ ಸ್ಪರ್ಧೆ ಏರ್ಪಡಲಿದೆ.
ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್ - D K Suresh
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26 ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಚುನಾವಣಾ ಸಮರ ಆರಂಭವಾಗಿದೆ. ಇದುವರೆಗೂ ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ - ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ವರೆಗೆ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಏ.4 ರಂದು ಕೊನೆ ದಿನವಾಗಿದೆ. ನಾಮಪತ್ರ ಪರಿಶೀಲನೆ ಏ.5 ರಂದು ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಏ.8 ರಂದು ಕೊನೆ ದಿನ. ಮತ ಎಣಿಕೆ ಜೂನ್ 4 ರಂದು ನಡೆಯಲಿದೆ. ಪ್ರತಿದಿನ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಸರ್ಕಾರಿ ರಜಾ ದಿನಗಳಲ್ಲಿ ನಾಮಪತ್ರ ಸಲ್ಲಿಸಲು ಅವಕಾಶವಿಲ್ಲ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಏ.26 ರಂದು ನಡೆದರೆ, ಉಳಿದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿದೆ.