ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಸರು ಕೊನೆಗೂ ಅಂತಿಮಗೊಂಡಿದೆ. ಹಲವರು ಆಕಾಂಕ್ಷಿಗಳ ನಡುವೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಶಿಷ್ಯ ಪದ್ಮರಾಜ್ ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಜನಿಸಿದ ಪದ್ಮರಾಜ್ ರಾಮಯ್ಯ ಅವರು ತಮ್ಮ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿದ್ದರು. ಬಿ.ಎ ಪದವಿಯನ್ನು ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು. 1995 ರಿಂದ ಕಾನೂನು ವೃತ್ತಿಯ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿ ಅವರೊಂದಿಗೆ ಆರಂಭಿಸಿದ್ದರು.
ತಾನು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿ ಅವರು ಎಲ್ಲ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದರು. 25 ವರ್ಷದಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಪಿ ಪ್ರತಿಷ್ಠಾನ ದಕ್ಷಿಣ ಕನ್ನಡ ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಅವರು ಮಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಆ ಬಳಿಕ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಇದನ್ನೂ ಓದಿ : ಮಗನ ಪರ ತಾಯಿ, ಅಕ್ಕನ ಪರ ತಮ್ಮ: ಬೆಳಗಾವಿಯಲ್ಲಿ ಹೆಬ್ಬಾಳ್ಕರ್ - ಜಾರಕಿಹೊಳಿ ಭರ್ಜರಿ ಮತಬೇಟೆ - Campaign In Belagavi