ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ ಸಂಬಂಧಿಸಿದಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಮತ್ತು ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಕಲಬುರಗಿಯ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಡ್ಡಾ ಮತ್ತು ಮಾಳವಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬಿಜೆಪಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಚಾರ ಕೋಮು ದ್ವೇಷಕ್ಕೆ ಕಾರಣ ಆಗುವಂಥದ್ದಲ್ಲ. ಈ ಕುರಿತುಂತೆ ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಹೀಗಾಗಿ, ಪ್ರಕರಣ ವಜಾ ಮಾಡಬೇಕು ಎಂದು ಕೋರಿದರು.
ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್, ಅರ್ಜಿದಾರರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವುದು ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡುವುದಾಗಿದೆ. ಇದರ ತನಿಖೆ ನಡೆಯಬೇಕಾಗಿದ್ದು, ಅರ್ಜಿದಾರರು ತನಿಖೆಯಲ್ಲಿ ಆರೋಪ ಮುಕ್ತವಾಗಿ ಬರಬೇಕಿದೆ. ಹೀಗಾಗಿ ಅರ್ಜಿ ವಜಾ ಮಾಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ, ಅರ್ಜಿ ಪುರಸ್ಕರಿಸಿ, ಜೆ.ಪಿ.ನಡ್ಡಾ ಮತ್ತು ಅಮಿತ್ ಮಾಳವಿಯಾ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ಅವರ ಅನಿಮೇಟೆಡ್ ವಿಡಿಯೋ ಪ್ರಕಟಿಸಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಆಸ್ತಿಯನ್ನು ಕಿತ್ತು, ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಲಿದೆ ಎಂದು ಹೇಳಲಾಗಿದೆ. ಅಲ್ಲದೇ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಂಪನ್ಮೂಲದಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ನೀಡಬೇಕು ಎಂದಿದ್ದರು ಎಂದು ವಿಡಿಯೋದಲ್ಲಿ ಹೇಳಲಾಗಿದೆ ಎಂದು ಆಕ್ಷೇಪಿಸಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವೀಣ ಕುಮಾರ್ ಪಾಟೀಲ್ ಅವರು ಕಲಬುರಗಿಯ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಡ್ಡಾ, ವಿಜಯೇಂದ್ರ ಮತ್ತಿತರ ವಿರುದ್ಧದ FIR ರದ್ದು