ಚಾಮರಾಜನಗರ: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ನೂರಾರು ಹೆಕ್ಟೇರ್ ತೋಟಗಳನ್ನು ಡಿನೋಟಿಫೈ ಮಾಡಿ, ಕೋಟಿ. ಕೋಟಿ ಹಣ ಮಾಡುತ್ತಿದ್ದರು. ಏನು ಸರ್ ಇವೆಲ್ಲಾ ಅಂತಾ ಕೇಳಿದ್ದಕ್ಕೆ ಏನು ಮಾಡೋದು ಪಕ್ಷಕ್ಕೆ ಹಣ ಬೇಕಲ್ಲ ಅಂತ ಹೇಳಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿ.ಕೆ.ಶಿವಕುಮಾರ್‌ಗೆ ನೀಡಿ ದೂರು ದಾಖಲು ಮಾಡುವಂತೆ ಹೇಳುತ್ತೇನೆ ಎಂದರು.
ಮತ್ತೊಂದೆಡೆ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಶಾಸಕರು, ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲದಿಂದ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇನ್ನು ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.
ಶಾಸಕರಾದ ಸಿ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಚುಡಾ ಅಧ್ಯಕ್ಷ ಮಹಮದ್ ಆಸ್ಗರ್ ಮುನ್ನಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.