ಬೆಂಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭಕ್ಕೂ ಮುಂಚಿತವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಗೆ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು, ಕುಡಿಯುವ ನೀರು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆ ಪ್ರಾರಂಭವಾಗುವ ಹಿನ್ನೆಲೆ ಆಯಾ ವಲಯ ವ್ಯಾಪ್ತಿಯಲ್ಲಿ ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಯಾ ವಲಯ ವ್ಯಾಪ್ತಿಯಲ್ಲಿ ಈಗಲೇ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿ, ಈ ಪ್ರದೇಶಗಳಲ್ಲಿ ಪ್ರವಾಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಅಲ್ಲದೇ ರಸ್ತೆ ಬದಿಯ ಡ್ರೈನೇಜ್ಗಳು ಸ್ವಚ್ಛವಾಗಿರುವಂತೆ ನೋಡಿಕೊಂಡು ರಸ್ತೆ ಮೇಲೆ ಬಿದ್ದಂತಹ ನೀರು ಸರಾಗವಾಗಿ ಹೋಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ : ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಆಯಾ ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು. ಪಾಲಿಕೆ ಪೊರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ಗಳನ್ನು ಈಗಾಗಲೇ ವಲಯವಾರು ನಿಯೋಜನೆ ಮಾಡಲಾಗಿದ್ದು, ನೀರು ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.
ಪಾಲಿಕೆ ವ್ಯಾಪ್ತಿಗೆ ಬರುವ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಲಮಂಡಳಿ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆಗೆ ನೀರಿನ ಸಂಬಂಧ ಬರುವ ದೂರುಗಳನ್ನು ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾ: ಲೋಕಸಭಾ ಚುನಾವಣೆಗೆ ಹಿನ್ನೆಲೆ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಿಯೂ ಜನಪ್ರತಿನಿಧಿಗಳಿರುವ ಜಾಹೀರಾತುಗಳು ಇಲ್ಲದಂತೆ ನೋಡಿಕೊಳ್ಳಬೇಕು. ಆಯಾ ವಲಯಗಳಲ್ಲಿ ಎಲ್ಲ ಪೋಸ್ಟರ್, ಬ್ಯಾನರ್ಗಳಿದ್ದರೆ ಕೂಡಲೆ ಅವುಗಳನ್ನು ತೆರವುಗೊಳಿಸಲು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಸಾರ್ವಜನಿಕ ಸ್ಥಳ, ಬಸ್ ತಂಗುದಾಣಗಳಲ್ಲಿ ಅಳವಡಿಸಿರುವಂತ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಾಣದಂತೆ ಮುಚ್ಚಬೇಕು. ಇನ್ನು ಗೋಡೆಗಳ ಮೇಲೆ ಬರೆದಿರುವಂತಹ ಬರಹಗಳನ್ನು ಕೂಡಲೇ ತೆರವುಗೊಳಿಸಬೇಕು. ಗೋಡೆಗಳ ಮೇಲೆ ಅಂಟಿಸಿರುವಂತ ಬಿತ್ತಿಪತ್ರಗಳನ್ನು ಕೂಡಲೆ ತೆರವುಗೊಳಿಸಬೇಕೆಂದು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ಸುರೋಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಮಾರ್ಚ್ 7ರೊಳಗೆ ನೀರಿನ ಟ್ಯಾಂಕರ್ ನೋಂದಣಿ ಕಡ್ಡಾಯ: ಬಿಬಿಎಂಪಿ ಆಯುಕ್ತ