ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು ಶೇ.97.91 ಮತದಾನವಾಗಿದೆ.
ಒಟ್ಟು 392 ಮತಗಟ್ಟೆಗಳ ಪೈಕಿ ಹಲವೆಡೆ ಶೇ.100ರಷ್ಟು ಮತದಾನ ದಾಖಲಾಗಿದೆ. ಒಟ್ಟು ಮತದಾರರ ಸಂಖ್ಯೆ 6,032.
ಈ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಇದೀಗ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿದ್ದಾರೆ. ಹೀಗಾಗಿ, ಅವರಿಂದ ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ನಡೆದಿದೆ.
ಬಿಜೆಪಿಯಿಂದ ಕಿಶೋರ್ ಬಿ.ಆರ್., ಕಾಂಗ್ರೆಸ್ನಿಂದ ರಾಜು ಪೂಜಾರಿ, ಎಸ್‌ಡಿಪಿಐನಿಂದ ಅನ್ವರ್ ಸಾದತ್ ಎಸ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದಿನಕರ್ ಉಳ್ಳಾಲ ಸ್ಪರ್ಧಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿ ಒಳಗೊಂಡಿರುವ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್‌ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿದ್ದರು.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್‌ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿದ್ದರು.
ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅ.24ರಂದು ನಡೆಯಲಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, "ನಮ್ಮ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಜಯಶಾಲಿಯಾಗಿ ಹೊಸ ದಾಖಲೆ ಬರೆಯಲಿದ್ದಾರೆ. ಪ್ರಸ್ತುತ ಚುನಾವಣೆಗಳಲ್ಲಿ ಜಾತಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇದೆ. ಆದರೆ, ಈ ಬಾರಿ ಪರಿಷತ್ ಚುನಾವಣೆಗೆ ಬಿಜೆಪಿ ಸಣ್ಣ ಸಮುದಾಯದ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಮಣೆ ಹಾಕಿದೆ" ಎಂದು ಹೇಳಿದರು.
ಇದನ್ನೂ ಓದಿ: ಪರಿಷತ್ ಉಪ ಚುನಾವಣೆ, ಸ್ಪೀಕರ್, ಸಂಸದ, ಶಾಸಕರಿಂದ ವೋಟಿಂಗ್: ಮದುವೆ ನಡುವೆ ಹಕ್ಕು ಚಲಾಯಿಸಿದ ಗ್ರಾಪಂ ಸದಸ್ಯ