ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ರಾಜಕಾರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಸಿ.ಪಿ. ಯೋಗೇಶ್ವರ್, ಕೆಲವೊಂದು ಚರ್ಚೆ ನಡೆಸಿ ನಂತರ ಇಬ್ಬರು ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ಆಗಮಿಸಿದರು.
ಸಿಎಂ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಯೋಗೇಶ್ವರ್ ಅವರ ಆಶೀರ್ವಾದ ಪಡೆದರು. ನಂತರ ಸಿದ್ದರಾಮಯ್ಯ ಅವರು ಯೋಗೇಶ್ವರ್ ಅವರ ಬೆನ್ನು ತಟ್ಟಿ ಬರಮಾಡಿಕೊಂಡರು.
ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಖಚಿತ ಎಂದು ಹೇಳಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಳೆಯೇ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ಪ್ರಾಥಮಿಕ ಸ್ಥಾನಕ್ಕೂ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಸಿ.ಪಿ. ಯೋಗೇಶ್ವರ್ ಈಗಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಕೂಡ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಕಚೇರಿಗೆ ತೆರಳಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅವರೇ ತಿಳಿಸಿದ್ದಾರೆ.
ಇದನ್ನೂ ಓದಿ: ಚುನಾವಣೆ ಮಾಡಲು ಹೆದರಲ್ಲ, ಹಿಂಜರಿಯಲ್ಲ: ಕಾರ್ಯಕರ್ತರ ಭಾವನೆಯೇ ಅಂತಿಮ - ಹೆಚ್.ಡಿ.ಕುಮಾರಸ್ವಾಮಿ