ಬೆಂಗಳೂರು : ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಪರಿಣಾಮ ಬೀರಲಿದ್ದು, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸೋಮವಾರ ಮತ್ತು ಮಂಗಳವಾರ ಕೊಡಗು ಜಿಲ್ಲೆಗೆ, ಸೋಮವಾರ ಒಂದು ದಿನ ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ ಜಿಲ್ಲೆಗೆ ನಾಳೆಯಿಂದ ಮೂರು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಜೊತೆಗೆ ಭಾನುವಾರ ಮತ್ತು ಮಂಗಳವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1 ರಿಂದ 2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ : ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 25 ಮತ್ತು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹೇಳಿದೆ.
ತಾಪಮಾನ ಗಣನೀಯವಾಗಿ ಇಳಿಕೆ : ರಾಜ್ಯಾದ್ಯಂತ ತೀವ್ರ ಚಳಿಯ ಅನುಭವವಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 17, ಮೈಸೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 20, ಮಂಡ್ಯದಲ್ಲಿ ಗರಿಷ್ಠ 27 ಮತ್ತು ಕನಿಷ್ಠ 20 ಮತ್ತು ಹುಬ್ಬಳ್ಳಿಯಲ್ಲಿ ಗರಿಷ್ಠ 29 ಕನಿಷ್ಠ 17 ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ವಾಡಿಕೆಯಂತೆ ಡಿಸೆಂಬರ್ ಎರಡನೇ ವಾರ ಚಳಿ ತೀವ್ರವಾಗುತ್ತಿತ್ತು. ಆದರೆ, ಈ ಬಾರಿ ನವೆಂಬರ್‌ನಲ್ಲೇ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ ಎಂದು ಹೇಳಿದೆ.
ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದೇನು?: 'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ವೈಪರೀತ್ಯದ ಕಾರಣ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮೈಕೊರೆಯುವಂತಹ ಚಳಿ ಇರಲಿದೆ' ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೆಂಗಳೂರಿಗೆ ಫೆಂಗಲ್ ಚಂಡಮಾರುತದ ಎಫೆಕ್ಟ್, ಮೂರ್ನಾಲ್ಕು ದಿನ ಮಳೆ ಸಾಧ್ಯತೆ: ಮುಂಜಾಗ್ರತಾ ಕ್ರಮಕ್ಕೆ ಪಾಲಿಕೆ ಆಯುಕ್ತರ ಸೂಚನೆ!