ಬೆಂಗಳೂರು: ಮುಂಗಾರು ಹಂಗಾಮಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಈ ಹಿನ್ನೆಲೆ ಜನರಿಗೆ ನೀರಿನ ಅಭಾವ ಉಂಟಾಗದಂತೆ ಆಯಾ ಗ್ರಾಮ ಪಂಚಾಯಿತಿಯಲ್ಲಿ ಖಾಸಗಿ ನೀರಿನ ಟ್ಯಾಂಕರ್ಗಳಿಗೆ ದರ ನಿಗದಿಪಡಿಸಲು ಶೀಘ್ರವಾಗಿ ಟೆಂಡರ್ ಕರೆದು, ಅಂತಿಮ ದರ ನಿಗದಿಗೊಳಿಸಲು ಕ್ರಮವಹಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕುಗಳಲ್ಲಿ ಮುಂಗಾರಿನಲ್ಲಿ ಎದುರಾಗುವ ನೀರಿನ ಅಭಾವವನ್ನು ನೀಗಿಸಲು ಗ್ರಾಮ ಪಂಚಾಯಿತಿಗಳಲ್ಲಿ ಖಾಸಗಿ ಬೋರ್ವೆಲ್ ಗುರುತಿಸಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನೀರಿನ ಟ್ಯಾಂಕರ್ಗಳ ದರ ನಿಗದಿಪಡಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಬರ ಪರಿಹಾರ ನಿಧಿಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಮುಂಗಾರಿನಲ್ಲಿ ಜಾನುವಾರುಗಳಿಗೆ ಉಂಟಾಗುವ ಮೇವಿನ ಕೊರತೆ ನೀಗಿಸಲು 21 ವಾರಗಳ ಮೇವನ್ನು ಶೇಖರಿಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು. ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಎಸ್ ಕಾಂತರಾಜು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಸಂಚಾರ ನಿಯಮ ಉಲ್ಲಂಘಿಸುವ ನೀರಿನ ಟ್ಯಾಂಕರ್ ಚಾಲಕರ ವಿರುದ್ಧ ಕಾರ್ಯಾಚರಣೆ: 595 ಪ್ರಕರಣ ದಾಖಲು