ಮೈಸೂರು : ಹೊಸ ವರ್ಷದಲ್ಲಿ ವಿಶೇಷವಾಗಿ ಚಾಮುಂಡೇಶ್ವರಿ ಬೆಟ್ಟದ ಶ್ರೀ ಚಾಮುಂಡಿ ತಾಯಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅವರಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ನಲ್ಲಿ ನಡೆದ ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬಂದೋಬಸ್ತ್ ವ್ಯವಸ್ಥೆ ಮಾಡಿ, ವಾಹನ ಸಂಚಾರ ನಿಯಂತ್ರಣ ಮಾಡುವುದರ ಮೂಲಕ ಚಾಮುಂಡಿ ಬೆಟ್ಟ ರಸ್ತೆ ಮಾರ್ಗದ ಮೂಲಕ ಪ್ರವೇಶಿಸುವ ಎಲ್ಲಾ ಗೇಟ್ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಿ, ಚಾಮುಂಡಿ ಬೆಟ್ಟಕ್ಕೆ ಹೊಸವರ್ಷದ ದಿನ ಮಾತ್ರ ಆಟೋಗಳ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಸೂಚಿಸಿದರು.
ಆಟೋಗಳ ಪ್ರವೇಶವನ್ನು ನಿರ್ಬಂಧಿಸಿರುವ ಹಿನ್ನೆಲೆ ಕೆಎಸ್ಆರ್ಟಿಸಿಯ ಅಧಿಕಾರಿಗಳು ಅಗತ್ಯಕ್ಕೆ ಅನುಗುಣವಾಗಿ ಕೆಎಸ್ಆರ್ಟಿಸಿ ಬಸ್ಗಳನ್ನ ನಿಯೋಜಿಸಿ ಭಕ್ತಾದಿಗಳಿಂದ ಟಿಕೆಟ್ ಪಡೆದುಕೊಳ್ಳಬೇಕು. ಅಲ್ಲದೆ ನಗರದ ಇತರೆ ಪ್ರದೇಶಗಳಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಮತ್ತು ನಗರ ಬಸ್ ನಿಲ್ದಾಣದಿಂದ ಹಾಗೂ ರೈಲ್ವೆ ಸ್ಟೇಷನ್ನಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.
ಹೊಸವರ್ಷದ ದಿನದಂದು ಸಾರ್ವಜನಿಕರಿಗೆ ಬೆಳಗ್ಗೆ 6:30 ಗಂಟೆಯಿಂದಲೇ ತಾವರೆ ಕೆರೆ ಗೇಟ್ ಅನ್ನು ತೆರೆದಿಡಲಿದ್ದು, ದರ್ಶನಕ್ಕೆ ಬರುವ ಭಕ್ತಾದಿಗಳು ಪಾರ್ಕಿಂಗ್ ಸ್ಥಳದಿಂದಲೇ ಸರದಿ ಸಾಲಿನಲ್ಲಿ ದೇವಸ್ಥಾನಕ್ಕೆ ಆಗಮಿಸಬೇಕು ಎಂದು ಮಾಹಿತಿ ನೀಡಿದರು.
ಚಾಮುಂಡಿ ಬೆಟ್ಟಕ್ಕೆ ಹೊಸ ವರ್ಷದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಕಸ ಬೀಳುವ ಪ್ರಮಾಣ ಹೆಚ್ಚಾಗಿರುತ್ತದೆ. ಹಾಗಾಗಿ, ಒಂದು ದಿನದ ಮಟ್ಟಿಗೆ ಪಾಲಿಕೆಯ ವತಿಯಿಂದ 10 ಜನ ಪೌರಕಾರ್ಮಿಕರನ್ನು ಮತ್ತು ಒಂದು ಕಾಂಪ್ಯಾಕ್ಟ್ ವಾಹನವನ್ನು ನಿಯೋಜಿಸಬೇಕು. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತುವ ಪಾದದ ಬಳಿ ತಾತ್ಕಾಲಿಕವಾಗಿ ಮೊಬೈಲ್ ಟಾಯ್ಲೆಟ್ ಅನ್ನು ಸ್ಥಾಪಿಸುವಂತೆ ಸೂಚಿಸಿದರು.
ದಾಸೋಹ ಭವನದಲ್ಲಿ ಭಕ್ತಾದಿಗಳಿಗೆ ಉಚಿತ ಅನ್ನದಾಸೋಹ ವ್ಯವಸ್ಥೆಯನ್ನು ಕಲ್ಪಿಸುವವರು ಹಿಂದಿನ ದಿನವೇ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ದಾಸೋಹದ ದಿನದಂದು ಬೆಳಗ್ಗೆಯಿಂದ ಸಂಜೆಯವರೆಗೂ ನಿರಂತರವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು. ದೇವಾಲಯದಲ್ಲಿ ಈಗಾಗಲೇ ಒಂದು ಆಂಬುಲೆನ್ಸ್ ವ್ಯವಸ್ಥೆ ಇದೆ. ಹೆಚ್ಚುವರಿಯಾಗಿ ಒಂದು ದಿನದ ಅವಧಿಗೆ ಮತ್ತೊಂದು ಆಂಬ್ಯುಲೆನ್ಸ್, ನುರಿತ ವೈದ್ಯರು, ಚಾಲಕ ಹಾಗೂ ಅಗತ್ಯ ಸಿಬ್ಬಂದಿಯನ್ನ ದೇವಾಲಯದ ಹತ್ತಿರ ನಿಯೋಜಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಬೆಳಗ್ಗೆ ತಯಾರು ಮಾಡುವ ಪ್ರಸಾದದ ಗುಣಮಟ್ಟವನ್ನು ಅಧಿಕಾರಿಗಳು ಪರೀಕ್ಷಿಸಿ ಗುಣಮಟ್ಟದ ಪ್ರಮಾಣ ಪತ್ರವನ್ನು ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರೂಪ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಹೊಸ ವರ್ಷಾಚರಣೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಡಿಸಿಎಂ - NEW YEAR CELEBRATION