ಬೆಂಗಳೂರು: ಬಿಜೆಪಿ ವಿರುದ್ಧ ಮಾನ ಹಾನಿಕರ ಜಾಹೀರಾತು ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ವಿನಾಯತ್ತಿ ನೀಡಿದೆ. ಬಿಜೆಪಿ ಪಕ್ಷ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಒಂದು ದಿನಕ್ಕೆ ವಿನಾಯ್ತಿ ನೀಡಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಮುಂದಿನ ವಿಚಾರಣೆ ವೇಳೆ ಅಂದರೆ ಜೂನ್ 7 ರಂದು ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿ ಆದೇಶಿಸಿದೆ.
ಇದಕ್ಕೂ ಮುನ್ನ ವಿಚಾರಣೆ ಸಂದರ್ಭದಲ್ಲಿ ಬಿಜೆಪಿ ಪರ ವಕೀಲರು, ರಾಹುಲ್ ಗಾಂಧಿಗೆ ಈಗಾಗಲೇ ಸಮನ್ಸ್ ಜಾರಿ ಮಾಡಲಾಗಿದೆ. ಆದರೂ ಖುದ್ದು ಹಾಜರಾಗಿಲ್ಲ. ಹೀಗಾಗಿ ವಾರಂಟ್ ಜಾರಿ ಮಾಡಬೇಕು ಎಂದು ಕೋರಿದ್ದರು. ಇದಕ್ಕೆ ಆಕ್ಷೆಪಿಸಿದ್ದ ರಾಹುಲ್ ಗಾಂಧಿ ಪರ ವಕೀಲರು, ನಮ್ಮ ಕಕ್ಷಿದಾರರು ಚುನಾವಣಾ ಕಾರಣದಿಂದ ಖುದ್ದು ಹಾಜರಾಗಿಲ್ಲ. ಮುಂದಿನ ವಿಚಾರಣೆ ವೇಳೆ ಹಾಜರಾಗಲಿದ್ದು, ಖುದ್ದು ಹಾಜರಿಗೆ ವಿನಾಯಿತಿ ನೀಡಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ವೇಳೆ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿತ್ತು.
ಅಲ್ಲದೇ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ನ (ಬಿಜೆಪಿ) ಸರ್ಕಾರವು 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಆರೋಪಿಸಿತ್ತು.
ಡಬಲ್ ಎಂಜಿನ್ ಸರ್ಕಾರಕ್ಕೆ ಬದಲಾಗಿ, ಟ್ರಬಲ್ ಎಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಹಾನಿ ಮಾಡಿ, ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.