ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು, ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿತು.
ಬುಧವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಷಯ ಪ್ರಸ್ತಾಪಿಸಿತು. ಅಲ್ಲದೆ, ಡೆಂಗ್ಯೂ ಹೆಚ್ಚಳ ಸಂಬಂಧ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂಬುದಾಗಿ ಆಂಗ್ಲ ಪತ್ರಿಕೆಯೊಂದಕ್ಕೆ ರಾಯಚೂರಿನ ವ್ಯಕ್ತಿಯೊಬ್ಬರು ಬರೆದಿದ್ದ ಸಂಪಾದಕರಿಗೆ ಪತ್ರ ಅಂಕಣದ ವರದಿಯನ್ನು ಪ್ರಸ್ತಾಪಿಸಿತು. ಜೊತೆಗೆ, ಇತರೆ ಪತ್ರಿಕೆಗಳ ವರದಿಯನ್ನೂ ಉಲ್ಲೇಖಿಸಿ ಅರ್ಜಿ ದಾಖಲಿಸಿಕೊಂಡಿತು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿ, ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನ ಪರಿಚ್ಛೇದ 21ರ ಅಡಿಯಲ್ಲಿ ಮೂಲಭೂತ ಹಕ್ಕಾಗಿದೆ ಎಂದು ತಿಳಿಸಿದ ಪೀಠ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಿ, ಡೆಂಗ್ಯೂ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ರೋಗಿಗಳಿಗಾಗಿ ಒದಗಿಸಿರುವ ವೈದ್ಯಕೀಯ ಮೂಲಸೌಲಭ್ಯಗಳ ಕುರಿತ ಸಂಪೂರ್ಣ ವಿವರ, ಈ ಕರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳು, ಸೊಳ್ಳೆಗಳ ಸಂಖ್ಯೆ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.
ಅಲ್ಲದೆ, ರಿಜಿಸ್ಟ್ರಾರ್ ಜನರಲ್ ಅವರು, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಸರ್ಕಾರ ಎಲ್ಲಾ ಪ್ರಾಧಿಕಾರಗಳಿಗೆ ಅರ್ಜಿ ಸಲ್ಲಿಕೆಗೆ ಇರುವ ಪ್ರಕ್ರಿಯೆಗಳು ಪೂರ್ಣಗೊಳ್ಳದಿದ್ದರೂ ಇಂದೇ ನೋಟಿಸ್ ತಲುಪುವಂತೆ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು. ಈ ವೇಳೆ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಡೆಂಗ್ಯೂ ನಿಯಂತ್ರಣ ಮತ್ತು ಆರೋಗ್ಯ ಸೌಲಭ್ಯಗಳ ಕುರಿತಂತೆ ರಾಜ್ಯ ಸರ್ಕಾರ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಡೆಂಗ್ಯೂ ಪ್ರಕರಣ ಹೆಚ್ಚಳ: ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸಿಎಂ ಸೂಚನೆ - Dengue Case Spread