ಬೆಂಗಳೂರು: ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧವೂ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
"ಸೆ.15ರಂದು ಬಿಹಾರದಲ್ಲಿ ವಂದೇ ಭಾರತ್ ರೈಲು ಉದ್ಘಾಟನೆಯ ವೇಳೆ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ದೇಶಕ್ಕೆ ರಾಹುಲ್ ಗಾಂಧಿ ದೊಡ್ಡ ಶತ್ರು. ಅವರು ಭಯೋತ್ಪಾದಕ ಎಂದು ಹೇಳಿದ್ದರು. ಅಲ್ಲದೇ ಅನ್ಯ ಧರ್ಮಗಳ ಬಗ್ಗೆ ಹಗುರವಾಗಿ ಮಾತನಾಡಿ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ" ಎಂದು ಕಾಂಗ್ರೆಸ್ ಮುಖಂಡ ರವೀಂದ್ರ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬುಧವಾರವಷ್ಟೇ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು.
"ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ವೈಯಕ್ತಿಕವಾಗಿ ನಿಂದಿಸಿದ್ದಾರೆ. ಅಲ್ಲದೇ ಧರ್ಮಗಳ ನಡುವಿನ ಕೋಮು ಸೌಹಾರ್ದತೆಗೆ ಹಾನಿ ಉಂಟು ಮಾಡುವುದಲ್ಲದೆ, ರಾಹುಲ್ ಗಾಂಧಿ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದಾರೆ" ಎಂದು ವಿಡಿಯೋ ಕ್ಲಿಪಿಂಗ್ ಸಮೇತ ಅವರು ದೂರು ನೀಡಿದ್ದರು.
ಇದನ್ನೂ ಓದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು