ಬೆಂಗಳೂರು: ''ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ನೀಡಲಾಗಿದೆ'' ಎಂದು ಮಾಜಿ ಪ್ರಧಾನಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.
ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಎರಡೂ ಚುನಾವಣೆಗಳಿಗೆ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ನಾನು ಚರ್ಚೆ ಮಾಡಿದ್ದೇನೆ. ಎಲ್ಲ ನಾಯಕರ ಅಭಿಪ್ರಾಯ ಆಲಿಸಿದ್ದೇನೆ. ಈ ಬಗ್ಗೆ ಕುಮಾರಸ್ವಾಮಿ ಕೋರ್ ಕಮಿಟಿ ಹಾಗೂ ಪಕ್ಷದ ಎಲ್ಲ ನಾಯಕರೊಂದಿಗೆ ಸಭೆ ನಡೆಸಿ ನಿರ್ಧಾರ ಮಾಡುತ್ತಾರೆ'' ಎಂದರು.
''ಶಿಕ್ಷಕರ ಕ್ಷೇತ್ರದಲ್ಲಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕ್ ಅವರ ಹೆಸರುಗಳಿವೆ. ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ. ಇನ್ನೊಬ್ಬರಿಗೆ ಬೇರೆ ಕಡೆ ಅವಕಾಶ ಕಲ್ಪಿಸಲಾಗುವುದು. ಇಬ್ಬರಲ್ಲಿ ಯಾರು ಎನ್ನುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೇ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು'' ಎಂದು ಹೇಳಿದರು.
ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧಿಸಲ್ಲ: ''ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತಪಡಿಸಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು, ಇಲ್ಲವೇ ನಿಖಿಲ್ ನಿಲ್ಲಬೇಕು ಎಂದು ಅಪೇಕ್ಷೆ ಮಾಡಿದ್ದಾರೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನಮ್ಮ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಬೇಕಿದೆ. ಈ ಬಗ್ಗೆ ವಿನಾಃಕಾರಣ ಊಹಾಪೋಹ ಸೃಷ್ಟಿ ಮಾಡಲಾಯಿತು. ಆದರೆ, ಅವರು ಎಂದೂ ಲೋಕಸಭೆಗೆ ಹೋಗುವೆ ಎಂದಿಲ್ಲ ಎಂದು'' ಸ್ಪಷ್ಟವಾಗಿ ನುಡಿದರು.
ಮೂರು ದಿನ ಮಂಡ್ಯ ಪ್ರವಾಸ: ''ಪಕ್ಷ ಸಂಘಟನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲ ಕಾರ್ಯಕರ್ತರು, ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಬಳಿಕ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ. ನಾವು ಎನ್ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆ ಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತಾರೆ'' ಎಂದು ದೇವೇಗೌಡರು ತಿಳಿಸಿದರು.
ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಯವರು, ''ಇಲ್ಲಿ ಜೆಡಿಎಸ್ - ಬಿಜೆಪಿ ಎನ್ನುವುದಲ್ಲ. ಎನ್ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಎಲ್ಲ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಆಗಲಿದೆ'' ಎಂದರು.
ವರಿಷ್ಠರು ನಿರ್ಧರಿಸುತ್ತಾರೆ ಎಂದ ನಿಖಿಲ್: ಇದೇ ವೇಳೆ, ಸಭೆ ಬಳಿಕ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಸ್ಪರ್ಧೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ''ದೇವೇಗೌಡರ ನಿವಾಸದಲ್ಲಿ ಎಂಟು ಸಭೆಗಳು ಆಗಿವೆ. ದೇವೇಗೌಡರ ಗಮನಕ್ಕೆ ಅಭಿಪ್ರಾಯವನ್ನು ತಂದಿದ್ದಾರೆ. ದೇಶದ ಪ್ರಧಾನಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಎಲ್ಲರೂ ಸೇರಿ ನಿರ್ಧಾರ ಮಾಡುತ್ತಾರೆ'' ಎಂದು ತಿಳಿಸಿದರು.
ವಿಧಾನಪರಿಷತ್ನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ವಿರುದ್ಧ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಕೆಲಸ ಮಾಡಿದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ''ಒಂದು ವ್ಯಕ್ತಿಯನ್ನು ಇಷ್ಟೊಂದು ಗಂಭೀರವಾಗಿ ಪರಿಗಣಿಸಬಾರದು, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರೆಲ್ಲರೂ ರಂಗನಾಥ್ ಅವರ ಗೆಲುವಿನ ಶ್ರಮಿಸುತ್ತಿದ್ದಾರೆ. ಹೀಗಾಗಿ, ಯಾರೋ ಒಬ್ಬ ವ್ಯಕ್ತಿಯನ್ನಿಟ್ಟುಕೊಂಡು ಮಾತನಾಡುವುದು ಸೂಕ್ತವಲ್ಲ'' ಎಂದು ಪ್ರತಿಕ್ರಿಯಿಸಿದರು.
ಜೆಡಿಎಸ್ ಶಾಸಕಿ ಕರೆಮ್ಮ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ''ಈ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕರೆಮ್ಮ ಅವರ ಬಳಿ ತಿಳಿದುಕೊಂಡು ಮಾತನಾಡುತ್ತೇನೆ'' ಎಂದು ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಂಡ್ಯ ಜಿಲ್ಲೆಯ ಮುಖಂಡರೊಂದಿಗೆ ದೇವೇಗೌಡ ಸಭೆ