ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಬುಧವಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಆಗಮಿಸುವ ನಿರೀಕ್ಷೆ ಇದೆ. ಅವರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳು, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಿಗಮ ಮಂಡಳಿಗಳ ಅಧ್ಯಕ್ಷರುಗಳು ಸಹ ಆಗಮಿಸಲಿದ್ದಾರೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ಗಣ್ಯರು, ಅತಿಥಿಗಳನ್ನು ಆಹ್ವಾನಿಸಲಾಗುವುದು. ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಶಕ್ತಿ ಯೋಜನೆಗೆ 10 ಬಸ್ ಬಿಡುಗಡೆ: ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಸಾರಿಗೆ ನಿಗಮದಿಂದ ಹೊಸ ಬಸ್‍ಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಪ್ರಸ್ತುತ ಜಿಲ್ಲೆಯ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ 100 ಬಸ್‍ಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಹಂತ ಹಂತವಾಗಿ ಬಸ್‍ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ರಾಜ್ಯದ ಬಹುತೇಕ ಕುಟುಂಬಗಳ ಸದಸ್ಯರು ಈ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಾಗಿರುವುದು ವೈಯಕ್ತಿಕವಾಗಿ ಸಂತೋಷವಾಗಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ಕೂಡ ನನಗಿದೆ. ಇನ್ನು ಸಮಾವೇಶ ನಡೆಯುವ ದಿನದಂದು ಫ್ರೀಡಂ ಪಾರ್ಕಿನ ಹೊರಾಂಗಣದಲ್ಲಿ ಅಲ್ಲಮ ಪ್ರಭುಗಳ ವಚನದ ಸಾಲುಗಳನ್ನು ಪ್ರಕಟಿಸಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.
ಶಾಲಾ ಮಕ್ಕಳಿಗೆ ಹಾಲು, ರಾಗಿ ಮಾಲ್ಟ್ ವಿತರಣೆ: ವಿಶೇಷವಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 5 ದಿನಗಳ ಕಾಲ ಪೌಷ್ಟಿಕ ಆಹಾರ, ಹಾಲು ಮತ್ತು ಎರಡು ದಿನಗಳ ಕಾಲ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ವಾರದ ನಾಲ್ಕು ದಿನಗಳ ಕಾಲ ಮಕ್ಕಳಿಗೆ ಪೌಷ್ಟಿಕ ಆಹಾರ ರಾಗಿ ಮಾಲ್ಟ್ ಅನ್ನು ನೀಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ರಾಜ್ಯದ 59 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯುತ್ತಿರುವುದು ವಿಶೇಷವಾಗಿದೆ ಎಂದು ಸಚಿವರು ಹೇಳಿದರು.
ಈವರೆಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದಿರುವ, ವಂಚಿತರ ಅನುಕೂಲಕ್ಕಾಗಿ ವೇದಿಕೆಯ ಇಕ್ಕೆಲಗಳಲ್ಲಿ ದೂರು ಸ್ವೀಕಾರ ಹಾಗೂ ಸಮಸ್ಯೆ ನಿವಾರಣೆಗೆ ಸಲಹಾ ಕೊಠಡಿಗಳನ್ನು ಸ್ಥಾಪಿಸಲಾಗುವುದು. ಅರ್ಹರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕು. ಇನ್ನು ಪ್ರಸ್ತುತ ಆಡಳಿತಾರೂಡ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸದುದ್ದೇಶದಿಂದ ಕಳೆದ ಸಾಲಿನಲ್ಲಿ ಶಿಕ್ಷಣ ಇಲಾಖೆಗೆ ನಿಗದಿಗೊಳಿಸಿದ 37 ಸಾವಿರ ಕೋಟಿ ಅನುದಾನವನ್ನು ಪ್ರಸಕ್ತ ಸಾಲಿಗೆ 44,000 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: 'ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ' ಆದೇಶದಲ್ಲಿ ಪ್ರಿಂಟ್ ಮಿಸ್ಟೇಕ್ ಆಗಿತ್ತು: ಸಚಿವ ತಂಗಡಗಿ ಸ್ಪಷ್ಟನೆ