ಬೆಂಗಳೂರು: "ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದರು.
ಸದಾಶಿವನಗರದ ನಿವಾಸದ ಬಳಿ ಇಂದು, ಇತ್ತೀಚೆಗೆ ಬೆಂಗಳೂರಿನ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, "ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನಿಖೆ ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ" ಎಂದು ತಿಳಿಸಿದರು.
"ಈ ಮಧ್ಯೆ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಇದರೊಂದಿಗೆ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಕೆಫೆ ಸ್ಫೋಟ ವಿಚಾರದಲ್ಲಿ ಸಿಎಂ, ಡಿಸಿಎಂ ದ್ವಂದ್ವ ಹೇಳಿಕೆ ನೀಡಿಲ್ಲ: ಸಚಿವ ದಿನೇಶ್ ಗುಂಡೂರಾವ್
"ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂಬುದನ್ನು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ಕುರಿತು ರಾಜಕೀಯ ಮಾಡಲು ನನಗಿಷ್ಟವಿಲ್ಲ. ಇಂಥ ಸಂದರ್ಭದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯ ಬಗ್ಗೆ ಅರಿವಿರಬೇಕು" ಎಂದರು.
ಇದನ್ನೂ ಓದಿ: ಬೆಂಗಳೂರು ಕೆಫೆ ಸ್ಫೋಟ: ತನಿಖೆಗೆ ಸವಾಲಾದ ಆರೋಪಿ ಬಳಸಿಕೊಂಡ ಸಮಯ
ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ: ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, "ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವಿಲ್ಲದವರು ಈ ರೀತಿ ಮಾತನಾಡುತ್ತಾರೆ" ಎಂದು ತಿರುಗೇಟು ಕೊಟ್ಟರು.