ಮೈಸೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,137 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಫೆ.25ರಂದು ಲಿಖಿತ ಪರೀಕ್ಷೆ ನಡೆಯಲಿದೆ. ನಕಲು ಮತ್ತು ಹೊರಗಿನ ಮಾಹಿತಿ ಪಡೆದು ಪರೀಕ್ಷೆ ಬರೆಯಲು ಅವಕಾಶ ಸಿಗಬಾರದು ಎಂಬ ಕಾರಣಕ್ಕಾಗಿ ಪರೀಕ್ಷಾರ್ಥಿಗಳಿಗೆ ಕಠಿಣ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಬೆಳಗ್ಗೆ 11ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಿ ಕರೆಪತ್ರದ ಲಿಂಕ್ ಕಳುಹಿಸಲಾಗುತ್ತದೆ.
ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯ ಲಿಂಗಿ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್‌ರಹಿತ ಶರ್ಟ್‌ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಚಪ್ಪಲಿ ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು / ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸಬೇಕು. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ