ಚಾಮರಾಜನಗರ: ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಠಾತ್ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಮಡಹಳ್ಳಿ ಗ್ರಾಮದ ಮಾದಪ್ಪ(53) ಮೃತ ಚಾಲಕ.
ಮಾದಪ್ಪ ಮಡಹಳ್ಳಿಯ ಚೇತನ್ ಎಂಬುವರ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದರು. ಈ ವೇಳೆ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಹಾಕಿಕೊಂಡ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀನು ಮಾಲೀಕರು ಹಾಗೂ ರೈತರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಚಾಲಕನನ್ನು ಟ್ರ್ಯಾಕ್ಟರ್ನಿಂದ ಹೊರ ತೆಗೆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.
ಈ ಘಟನೆ ಬಗ್ಗೆ ಮಾಹಿತಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಾಲಕನ ಮೃತದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆ: ಶಾಲಾ ವಾಹನ-ಟ್ರ್ಯಾಕ್ಟರ್ ಡಿಕ್ಕಿ, ನಾಲ್ವರು ವಿದ್ಯಾರ್ಥಿಗಳು ಸಾವು