ನವದೆಹಲಿ/ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಸಿಎಂ ಸಿದ್ದರಾಮಯ್ಯ ಮತ್ತು ಇತರ ಕೆಲವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ (ಸೆಪ್ಟೆಂಬರ್ 30) ಪ್ರಕರಣ ದಾಖಲಿಸಿಕೊಂಡಿದೆ. ಈ ಮೂಲಕ ಭಾರೀ ಸದ್ದು ಮಾಡುತ್ತಿರುವ ಕೇಸ್ನಲ್ಲಿ ಕೇಂದ್ರ ತನಿಖಾ ಸಂಸ್ಥೆ ಪ್ರವೇಶ ಪಡೆದಂತಾಗಿದೆ.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಎಫ್ಐಆರ್ ಆಧಾರದಲ್ಲಿ ಇಡಿ ಇಸಿಐಆರ್(ECIR) ದಾಖಲಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಕುಟುಂಬವು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.
ಸೆಪ್ಟೆಂಬರ್ 27 ರಂದು ಎಫ್ಐಆರ್ ದಾಖಲಿಸಿದ್ದ ಲೋಕಾಯುಕ್ತ: ಇದರ ಬೆನ್ನಲ್ಲೇ, ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27 ರಂದು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದರು.
ಇದಕ್ಕೂ ಮೊದಲು, ಸಿಎಂ ವಿರುದ್ಧ ಪ್ರಕರಣದ ತನಿಖೆ ನಡೆಸಲು ರಾಜ್ಯಪಾಲರು ಆದೇಶ ನೀಡಿದ್ದರು. ಇದರ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಿಎಂ ವಿರುದ್ಧ ರಾಜ್ಯಪಾಲರು ಕೊಟ್ಟ ಆದೇಶವನ್ನು ಎತ್ತಿಹಿಡಿದಿತ್ತು.
ಪ್ರಕರಣದ ಹಿನ್ನೆಲೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಎಂ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಕೊಂಡ ಬಳಿಕ, ದೂರುದಾರ ಸ್ನೇಹಮಯಿ ಕೃಷ್ಣ ಅವರು ತನಿಖೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಯಿಂದಲೇ ನಡೆಸಬೇಕು ಎಂದು ಕೋರಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇದರ ಬೆನ್ನಲ್ಲೇ, ಇಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಇ.ಡಿ. ಅಧಿಕಾರ ವ್ಯಾಪ್ತಿ: ಕೇಂದ್ರ ತನಿಖಾ ಸಂಸ್ಥೆಯಾಗಿರುವ ಜಾರಿ ನಿರ್ದೇಶನಾಲಯವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇತರ ತನಿಖಾ ಸಂಸ್ಥೆಗಳು ದಾಖಲಿಸಿದ ಎಫ್ಐಆರ್ಗಳ ಮೇಲೆ ಸಂಸ್ಥೆ ತನಿಖೆಗೆ ಮುಂದಾಗುತ್ತದೆ. ಮುಡಾ ಕೇಸ್ನಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್ಐಆರ್ ಅನುಗುಣವಾಗಿ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಇಸಿಐಆರ್ ದಾಖಲಿಸಿಕೊಂಡಿದೆ.
ಇಸಿಐಆರ್ ಎಂದರೆ, ಪೊಲೀಸರು ದಾಖಲಿಸುವ ಎಫ್ಐಆರ್ಗೆ ಸಮ. ಈ ಮೂಲಕ ಆರೋಪಿಗಳನ್ನು ವಿಚಾರಣೆಗೆ ಕರೆಸಿಕೊಳ್ಳಲು ಮತ್ತು ತನಿಖೆಯ ಸಮಯದಲ್ಲಿ ಅವರ ಆಸ್ತಿಯನ್ನು ಫ್ರೀಜ್ ಮಾಡುವ ಅಧಿಕಾರ ಇಡಿ ಅಧಿಕಾರಿಗಳಿಗೆ ಇದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಇ.ಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ - Muda Scam