ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮತ್ತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕೈಗೊಂಡಿದ್ದಾರೆ.
ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಆಪ್ತ ನಾಗೇಂದ್ರ ಸಂಬಂಧಿ ನಿವಾಸ ಸೇರಿದಂತೆ, ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೂ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರ ಅವರನ್ನು ಜುಲೈ 18ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ತದನಂತರ, ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜುಲೈ 22ರ ವರೆಗೆ ಕಸ್ಟಡಿ ಅವಧಿ ವಿಸ್ತರಿಸಲಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ದರ್ಶನ್, ಸಹಚರರ ನ್ಯಾಯಾಂಗ ಬಂಧನ ಇಂದು ಅಂತ್ಯ - Darshan Judicial Custody