ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಂಟೇಜ್ ಕಾರ್ ಹಾಗೂ ಬೈಕ್ ರ‍್ಯಾಲಿ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ತುಷಾರ್ ಗಿರಿನಾಥ್, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದೆ. ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ವಿಂಟೇಜ್ ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ರ‍್ಯಾಲಿ ಮಾಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ನಗರ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶೇಕಡಾವಾರು ಮತದಾನ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ತಳಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು, ಇನ್ನೂ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಜ್ಞಾ ವಿಧಿ ಬೋಧನೆ : ಲೋಕಸಭಾ ಚುನಾವಣೆ ಹಿನ್ನೆಲೆ ವಿಂಟೇಜ್ ಕಾರ್ ರ‍್ಯಾಲಿ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸ್ಥಳದಲ್ಲಿ ನೆರೆದಿದ್ದವರೆಲ್ಲರೂ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ವಿಂಟೇಜ್ ಕಾರ್ ಹಾಗೂ ಬೈಕ್ಗಳ ರ‍್ಯಾಲಿ ಸಾಗಿದ ಹಾದಿ: ವಿಧಾನಸೌಧ ಗ್ರ‍್ಯಾಂಡ್ ಸ್ಟೆಪ್ಸ್ನಿಂದ ಪ್ರಾರಂಭವಾಗಿ ಇನ್ಫೆಂಟ್ರಿ ರಸ್ತೆ, ಎಂ.ಜಿ ರಸ್ತೆ (ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮೂಲಕ), ಟ್ರಿನಿಟಿ ವೃತ್ತ, ರೆಸಿಡೆನ್ಸಿ ರಸ್ತೆ ಮೂಲಕ ಕಂಠೀರವ ಕ್ರೀಡಾಂಗಣದ ಬಳಿ ರ‍್ಯಾಲಿ ಮುಕ್ತಾಯವಾಯಿತು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಮತದಾನ ಜಾಗೃತಿ: ವಿಶೇಷ ಚೇತನರ ಬೈಕ್ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ - Voter Awareness Jatha