ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್ ವರಿಷ್ಠರು ಸರಣಿ ಸಭೆ ನಡೆಸುತ್ತಿದ್ದಾರೆ. ಮುಂದುವರೆದ ಭಾಗವಾಗಿ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ಕುಣಿಗಲ್ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಿದ್ದಾರೆ. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಈ ಎರಡು ಕ್ಷೇತ್ರಗಳ ಮುಖಂಡರ ಜೊತೆ ಗೌಡರು ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಮುಖಂಡರ ಜೊತೆ ದೇವೇಗೌಡರು, ಮಂಜುನಾಥ್ ಗೆಲುವಿಗೆ ಜೆಡಿಎಸ್‌ನ ನಾಯಕರು, ಕಾರ್ಯಕರ್ತರು ಕೆಲಸ ಮಾಡಬೇಕು, ಚುನಾವಣೆ ಮುಗಿಯುವವರೆಗೆ ಅವಿರತವಾಗಿ ಶ್ರಮಿಸಿ ಮಂಜುನಾಥ್ ಅವರನ್ನು ಗೆಲ್ಲಿಸಬೇಕು ಎಂಬ ಸೂಚನೆಯನ್ನು ಮುಖಂಡರಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಜುನಾಥ್ ಅವರ ಗೆಲುವಿಗೆ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ಕೂಡ ನಡೆಸಿದ ಅವರು, ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಸಮನ್ವಯ ಸಾಧಿಸಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಪಕ್ಷದ ಮುಖಂಡರಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಾಳೆಯೂ ಸಭೆ ಮುಂದುವರಿಯಲಿದ್ದು, ರಾಮನಗರ ಕ್ಷೇತ್ರದ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಕಾಂಗ್ರೆಸ್‌ನಿಂದ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯುವುದರಿಂದ ಅವರನ್ನು ಮಣಿಸಲು ಜೆಡಿಎಸ್ - ಬಿಜೆಪಿ ಜಂಟಿಯಾಗಿ ರಣತಂತ್ರ ರೂಪಿಸುವಲ್ಲಿ ನಿರಂತರವಾಗಿದೆ. ಈ ನಿಟ್ಟಿನಲ್ಲಿ ದೇವೇಗೌಡರು ಸಹ ನಿರಂತರವಾಗಿ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.
ದೆಹಲಿಗೆ ಹೋಗುವುದು ಮುಂದೂಡಿದ ಹೆಚ್ಡಿಕೆ: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಲು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳುವುದು ಮುಂದೂಡಿಕೆಯಾಗಿದೆ.
ಈಗಾಗಲೇ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಲಾಗಿದೆ. ಆದರೆ, ಅಂತಿಮ ಚರ್ಚೆ ನಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳುವ ಬಗ್ಗೆ ನಿರ್ಣಯಿಸಲಾಗಿತ್ತು. ಆದರೆ, ಹರಿಯಾಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯಿಂದಾಗಿ ಬಿಜೆಪಿ ವರಿಷ್ಠರು ಆ ಕಡೆ ಹೆಚ್ಚಿನ ಗಮನಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವುದು ಮುಂದೂಡಿಕೆಯಾಗಿದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಕೇಂದ್ರದ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕಿದೆ. ಜೆಡಿಎಸ್‌ಗೆ ಲಭ್ಯವಾಗುವ ಸೀಟು ಹಂಚಿಕೆ ಕುರಿತು ದೆಹಲಿ ಭೇಟಿ ಬಳಿಕವೇ ಕುಮಾರಸ್ವಾಮಿ ಅವರು ಬಹಿರಂಗಗೊಳಿಸಲಿದ್ದಾರೆ. ಇನ್ನೆರಡು ದಿನದಲ್ಲಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ಅಂತಿಮ ನಿರ್ಣಯ ಕೈಗೊಂಡ ಬಳಿಕ ಪ್ರಚಾರದ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಸಭೆ ನಡೆಯುತ್ತಿದೆ, ರಾಜ್ಯದ 20 ಅಭ್ಯರ್ಥಿಗಳು ಹೆಸರು ಘೋಷಣೆ ಆಗುತ್ತದೆ; ಶ್ರೀರಾಮುಲು