ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ಮಕ್ಕಳ ಕಲ್ಯಾಣಕ್ಕಾಗಿ 6,700 ಕೋಟಿ ಹೇಗೆ ಬಳಕೆಯಾಗಿದೆ ಎಂಬುದರ ಸಂಬಂಧ ವಿವರ ಸಲ್ಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಇದೇ ವೇಳೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ತಕ್ಷಣವೇ ನೆರವು ನೀಡಲು ಜಾರಿ ಮಾಡಿದ್ದ ಮಧ್ಯಂತರ ಆದೇಶ ಪಾಲನೆ ಮಾಡದ ಕಲ್ಯಾಣ ಮಂಡಳಿ ನಿಲುವನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಸಿಲು, ಮಳೆ ಎನ್ನದೇ ಶ್ರಮಪಡುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ರೂಪಾಯಿ ಸೆಸ್ ಸಂಗ್ರಹವಾಗುತ್ತಿದ್ದರೂ, ಅದನ್ನು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡದೇ, ಅಧಿಕಾರಿಗಳು ಐಷಾರಾಮಿ ಜೀವನ ಸಾಗಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಕುರಿತಂತೆ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಈ ಹಿಂದೆ 2024ರ ಏಪ್ರಿಲ್ 23ರಂದು ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ನಾಲ್ಕು ವಾರದೊಳಗೆ ಎಲ್ಎಲ್ಬಿ ಹಾಗೂ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಬೇಕು ಎಂದು ಮಂಡಳಿಗೆ ಆದೇಶಿಸಿತ್ತು. ಈ ಆದೇಶದ ನಂತರ ಅರ್ಜಿಯು ಪುನಃ ಇದೇ 7ರಂದು ವಿಚಾರಣೆಗೆ ನಿಗದಿಯಾಗಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು, ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ಪಾಲನೆಯಾಗಿಲ್ಲ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಇದರಿಂದ ಅಸಮಾಧಾನಗೊಂಡ ಪೀಠ, ಮಧ್ಯಂತರ ಆದೇಶ ಜಾರಿ ಮಾಡಲು ವಿಫಲವಾದ ಮಂಡಳಿ ವಿರುದ್ಧ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಮುಂದಿನ ವಿಚಾರಣೆ ವೇಳೆ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ 6,700 ಕೋಟಿ ಸೆಸ್, ಅದು ಹೊಂದಿರುವ ಬ್ಯಾಂಕ್ ಖಾತೆಯ ವಿವರಗಳು ಹಾಗೂ ಯಾವ ಸೌಲಭ್ಯಗಳಿಗೆ ಎಷ್ಟು ಖರ್ಚು ಮಾಡಲಾಗುತ್ತಿದೆ ಎನ್ನುವ ವಿವರಗಳನ್ನು ಒಳಗೊಂಡ ಪ್ರಮಾಣ ಪತ್ರವನ್ನು ಸಲ್ಲಿಸಿ ಎಂದು ಆದೇಶಿಸಿದರು. ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್ - High Court