ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗ ನೀಡಿದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಜಾನ್ ವೇಳೆ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣವನ್ನು ಖಂಡಿಸಿ ಬುಧವಾರ ನಗರತ್ ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ ಅವರು, ಮತೀಯ ಭಾವನೆಗಳನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಚಿಕ್ಕಪೇಟೆ ನಿವಾಸಿ ಸಾವಿತ್ರಿಹಳ್ಳಿ ಎಂಬುವರು ರಾಜ್ಯ ಚುನಾವಣಾ ಆಯೋಗಗಕ್ಕೆ ದೂರು ನೀಡಿದ್ದರು. ಆಯೋಗದ ಸೂಚನೆಯ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಬ್ಬನಿಗಾಗಿ ಮುಂದುವರಿದ ಶೋಧ: ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿರುವ ಹಲಸೂರುಗೇಟ್ ಠಾಣೆ ಪೊಲೀಸರು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯ ಸುಳಿವು ಸಿಕ್ಕಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರ್ತಪೇಟೆ ಗಲಾಟೆ ವಿಚಾರ ಬಿಜೆಪಿಯವರು ಸ್ವಾರ್ಥಕ್ಕೋಸ್ಕರ ಬಳಸುತ್ತಿದ್ದಾರೆ: ಸಚಿವ ಗುಂಡೂರಾವ್
ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಶಾಸಕ ಸುರೇಶ್ ಕುಮಾರ್ ಗರಂ
ಇನ್ನು ನಗರ್ತಪೇಟೆ ಗಲಾಟೆ ವಿಚಾರವನ್ನು ಬಿಜೆಪಿಯವರು ಸ್ವಾರ್ಥಕ್ಕೋಸ್ಕರ ಬಳಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಆರೋಪಿಸಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದ ದಿನೇಶ್ ಗುಂಡೂರಾವ್, ಒಬ್ಬ ಎಂಪಿ ತೇಜಸ್ವಿ ಸೂರ್ಯ ದ್ವೇಷದ ವಾತಾವರಣ ಸೃಷ್ಟಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದ್ದರು.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಬೇಕು. ಅನಾವಶ್ಯಕವಾಗಿ ಭಯ ಹುಟ್ಟಿಸಲಾಗುತ್ತಿದೆ. ಚುನಾವಣೆ ಇದೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಕಾಂಗ್ರೆಸ್ ಅನ್ನು ಹಿಂದೂ ವಿರೋಧಿ ಅಂತ ಬಿಂಬಿಸ್ತಿದ್ದಾರೆ. ಇವರೇ ಸೃಷ್ಟಿ ಮಾಡಿ ಭಯ ಮೂಡಿಸ್ತಿದ್ದಾರೆ. ಕ್ಷುಲ್ಲಕ ಕೀಳುಮಟ್ಟದ ಯೋಚನೆ ಬಿಜೆಪಿಯವರದ್ದು. ನಮಗೆ ವೋಟು ಮುಖ್ಯ ಎಂಬುದಷ್ಟೇ ಇವರಿಗೆ. ಏನಾದ್ರೂ ಆಗಲಿ ವೋಟು ಮುಖ್ಯ ಅಂತಾರೆ ಎಂದು ಕಿಡಿಕಾರಿದ್ದರು.