ಬೆಂಗಳೂರು: ತಮಿಳರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಡಿ ತಮಿಳುನಾಡಿನ ಮಧುರೈ ಪೊಲೀಸ್ ಠಾಣೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ನಗರದ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿಯೂ ಎಫ್ಐಆರ್ ದಾಖಲಾಗಿದೆ.
ರಾಜ್ಯ ಚುನಾವಣಾ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಗರ್ತಪೇಟೆಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ತಮಿಳುನಾಡಿನಿಂದ ನಗರಕ್ಕೆ ಬಂದು ಬಾಂಬ್ ಬ್ಲಾಸ್ಟ್ ಮಾಡ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಸಂಸದೆ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ತಮಿಳುನಾಡಿನ ಸಿಎಂ ಸ್ಟಾಲಿನ್ ಅವರು ಕೇಂದ್ರ ಸಚಿವೆಯ ಹೇಳಿಕೆಯನ್ನು ಖಂಡಿಸಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ್ದರು. ಸದ್ಯ ಚುನಾವಣಾ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಫೆ ಸ್ಫೋಟ ಪ್ರಕರಣ: ತಮಿಳರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಶೋಭಾ ಕರಂದ್ಲಾಜೆ ಕ್ಷಮೆಯಾಚನೆ