ಬೆಂಗಳೂರು: ಮುಂಗಾರು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಚುರುಕಾಗಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿನ ಮೂರು ಜಿಲ್ಲೆಗಳಿಗೆ ಐದು ದಿನ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮೀನುಗಾರರಿಗೆ ಕೂಡ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಸೇರಿದಂತೆ ಮೂರು ದಿನ ಯೆಲ್ಲೋ ಅಲರ್ಟ್, ನಂತರದ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಇಂದು ಮತ್ತು ಜುಲೈ 3 ರಿಂದ 5 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಜುಲೈ 5 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗ ಇರಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಿ ಗಾಳಿ ವೇಗವು 30 ರಿಂದ 40 ಕಿಲೋಮೀಟರ್ ಪ್ರತಿ ಗಂಟೆಗೆ ತಲುಪುವ ಸಾಧ್ಯತೆಯಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಎಲ್ಲಿ ಅತಿ ಹೆಚ್ಚು ಮಳೆ?: ನಿನ್ನೆಯಿಂದ ರಾಜ್ಯದಲ್ಲಿಯೇ ಅತಿ ಹೆಚ್ಚು 13 ಸೆ.ಮೀ ಮಳೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ದಾಖಲಾಗಿದೆ. ಉಳಿತದಂತೆ ಹೆಚ್ಚು ಮಳೆ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ (11 ಸೆಮೀ), ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ (9 ಸೆಮೀ), ಉಡುಪಿ ಜಿಲ್ಲೆಯ ಸಿದ್ಧಾಪುರಲ್ಲಿ ಮತ್ತು ಚಿಕ್ಕಮಗಳೂರಿನ ಕಮ್ಮರಡಿಯಲ್ಲಿ ( 8 ಸೆಮೀ), ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ (7 ಸೆಮೀ) ಎಂದು ದಾಖಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.
ನೈಋತ್ಯ ಮಾನ್ಸೂನ್ ರಾಜ್ಯದ ಒಳನಾಡಿನಲ್ಲಿ ಸಕ್ರಿಯವಾಗಿದೆ, ಕರಾವಳಿಯಲ್ಲಿ ಸಾಧಾರಣವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.
ಓದಿ: ರಾಜ್ಯದ ಏಕೈಕ ಆಷಾಢ ರಥೋತ್ಸವಕ್ಕೆ ಸಿದ್ಧತೆ ಆರಂಭ: ಇದು ನವಜೋಡಿಗಳ ಜಾತ್ರೆ - Chamarajeshwara Rathotsava