ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಹೆಚ್ಚಿನ ಪ್ರಭಾವವನ್ನು ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮುಂದಿನ ಐದು ದಿನಗಳಿಗೆ ಅಲ್ಲಿನ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲಿನ ಮೀನುಗಾರರಿಗೆ ಕೂಡ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮತ್ತು ಶಿವಮೊಗ್ಗ ಜಿಲ್ಲೆಗೆ ಇಂದಿನಿಂದ ಐದು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ನಾಳೆ ಹಾಗೂ ಜುಲೈ 6ಕ್ಕೆ, ಧಾರವಾಡಕ್ಕೆ ಇಂದು ಮತ್ತು ಜುಲೈ 5 ಹಾಗೂ 6 ರಂದು, ಜುಲೈ 5ರಿಂದ 7 ಹಾವೇರಿ ಜಿಲ್ಲೆಗೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತು ಜುಲೈ 5 ರಿಂದ 7ಕ್ಕೆ, ಹಾಸನ ಜಿಲ್ಲೆಗೆ ಜುಲೈ 6ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿರಂತರ ಗಾಳಿಯು (30ರಿಂದ 40 ಕಿಲೋಮೀಟರ್ ಪ್ರತಿ ಗಂಟೆಗೆ) ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಬೀಸಲಿದೆ. ಆ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕೊಟ್ಟಿಗೆಹಾರದಲ್ಲಿ ಅತಿ ಹೆಚ್ಚು ಮಳೆ: ರಾಜ್ಯದಲ್ಲಿ ನಿನ್ನೆಯಿಂದ(ಮಂಗಳವಾರ) ಈವರೆಗೆ ಅತಿ ಹೆಚ್ಚು ಮಳೆ ಎಂದರೆ 10 ಸೆಂ.ಮೀ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಸುರಿದಿದೆ. ಇನ್ನು ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 7 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆ ಮಾತ್ರ ಚುರುಕಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿತ್ತನೆ ಕಳೆದ ವರ್ಷಕ್ಕಿಂತ ಹೆಚ್ಚಳ: ಕೆಲವು ಬೆಳೆಗಳಿಗೆ ನೀರಿನ ಕೊರತೆ