ರಾಮನಗರ/ಚಿತ್ರದುರ್ಗ: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಬಿಡದಿಯ ಕೆಂಪಯ್ಯನದೊಡ್ಡಿ ಗ್ರಾಮದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಮೈಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಬಿಡದಿ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಂಧ್ರಪ್ರದೇಶ ಮೂಲದ ವಿಶ್ವ (21) ಹಾಗೂ ಸೂರ್ಯ (21) ಎಂಬ ಇಬ್ಬರು ಅಸುನೀಗಿದ್ದಾರೆ. ಮೃತರಿಬ್ಬರೂ ಕೂಡ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದುಬಂದಿದೆ.
ವೇಗವಾಗಿ ಬಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಮೈಸೂರಿನಿಂದ ಬೆಳಗ್ಗೆ ಬೆಂಗಳೂರಿನ ಕಡೆಗೆ ಈ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಬಿಡದಿ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಘಟಪ್ರಭಾ ನದಿಗೆ ಬಿದ್ದ ಟ್ರ್ಯಾಕ್ಟರ್: ಓರ್ವ ನಾಪತ್ತೆ, 12 ಮಂದಿ ಪಾರು - Tractor Fell Into River
ಚಿತ್ರದುರ್ಗದಲ್ಲಿ ಲಾರಿ - ಕಾರು ನಡುವೆ ಅಪಘಾತ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಘಟನೆ ನಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಇನ್ನುಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಮೃತರನ್ನು ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28) ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಅಪಘಾತ ಘಟಿಸಿದೆ. ವಿಜಯರೆಡ್ಡಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಬೆಂಗಳೂರಿನ ತಣಿಸಂದ್ರ ಮೂಲದವರು ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಾಗಲಕೋಟೆ: ಮೀನಿಗೆ ಹಾಕಿದ್ದ ಬಲೆಗೆ ಮೀನುಗಾರ ಬಲಿ; ಮಗಳ ಎದುರಲ್ಲೇ ನೀರಲ್ಲಿ ಮಳುಗಿ ಸಾವು