ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಹೈಕೋರ್ಟ್ನಲ್ಲಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿದೆ.
ತಮ್ಮ ಮಗಳಿಗೆ ಮಾಜಿ ಸಿಎಂ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿ ಸಂತ್ರಸ್ತೆಯ ತಾಯಿ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಯಡಿಯೂರಪ್ಪನವರನ್ನು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಇದರ ವಿರುದ್ಧ ಬಿಎಸ್‌ವೈ ತಕರಾರು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ ಸಿಐಡಿ ತನಿಖೆ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ (ತ್ವರಿತಗತಿ ಕೋರ್ಟ್) ವಿಚಾರಣೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಈ ಅರ್ಜಿ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕ ಸದಸ್ಯ ಪೀಠದ ಮುಂದೆ ಮಧ್ಯಾಹ್ನ 2.30ರ ಕಲಾಪದಲ್ಲಿ ವಿಚಾರಣೆ ನಡೆಯಲಿದೆ.
ಅರ್ಜಿಯಲ್ಲಿ ಬಿಎಸ್‌ವೈ ಹೇಳಿದ್ದೇನು?: ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ಆಧಾರರಹಿತವಾಗಿದೆ. ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ನಾಯಕರ ವಿರುದ್ಧ ದೂರು ನೀಡುವುದೇ ಹವ್ಯಾಸವಾಗಿದೆ. ಪ್ರಕರಣ ದಾಖಲಾದ ನಂತರ ಏಪ್ರಿಲ್ 12 ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ, ಧ್ವನಿ ಮಾದರಿ ಮಾತ್ರ ಸಂಗ್ರಹಿಸಿದರು. ದೂರಿನಲ್ಲಿ ಅಪರಾಧದ ಅಂಶಗಳಿಲ್ಲ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು'' ಎಂದು ಅರ್ಜಿಯಲ್ಲಿ ಬಿಎಸ್‌ವೈ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3 ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಎಫ್‌ಐಆರ್ ದಾಖಲಾಗಿದೆ. ದೂರಿನ ಗಂಭೀರತೆ ಪರಿಗಣಿಸಿದ್ದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು.
ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿರುವ ನ್ಯಾಯಪೀಠ, ಬಿಎಸ್‌ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ನಿರೀಕ್ಷಣಾ ಜಾಮೀನಿಗೂ ಅರ್ಜಿ: ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ಅರ್ಜಿ ಸಲ್ಲಿಕೆಯಾಗಿದ್ದು, ಇದರ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.
ಇದನ್ನೂ ಓದಿ: ಅಂದು ಲೋಕಾಯುಕ್ತ, ಇಂದು ಸಿಐಡಿ: 2ನೇ ಬಾರಿ ಅರೆಸ್ಟ್ ಆಗ್ತಾರಾ ಬಿ.ಎಸ್.ಯಡಿಯೂರಪ್ಪ? - Yediyurappa POCSO Case