ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿಯಷ್ಟು ಮೊತ್ತದ ದೊಡ್ಡ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ನೇತೃತ್ವದ ಸಭೆಯು ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.
ಜೂ. 28 ರಂದು ಎಲ್ಲ ಜಿಲ್ಲೆಗಳು, ತಾಲೂಕು ಮಟ್ಟದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತ ಬೇರೆಡೆ ವರ್ಗಾವಣೆ ಆಗಿದು ಹೇಗೆ?. ಆದ್ದರಿಂದ, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಮೇಲೆ ಅನುಮಾನ ಬರುತ್ತಿದೆ. ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಚಂದ್ರಶೇಖರ್ ಎಂಬ ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವರ ಮೌಖಿಕ ಆದೇಶದನ್ವಯ 187 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದನ್ನು ಡೆತ್ ನೋಟ್ನಲ್ಲಿ ಅವರು ಬರೆದಿಟ್ಟಿದ್ದರು ಎಂದರು.
ಸರ್ಕಾರಗಳು ಪರಿಶಿಷ್ಟ ವರ್ಗಗಳ ಸಮುದಾಯದ ಏಳಿಗೆ, ಮಕ್ಕಳ ಭವಿಷ್ಯದ ಸಲುವಾಗಿ ಎಸ್‍ಸಿ, ಎಸ್‍ಟಿಗಳಿಗೆ ಮೂಲಸೌಕರ್ಯ, ಭೂ ಒಡೆತನ, ನೇರ ಸಾಲ, ಉನ್ನತ ಶಿಕ್ಷಣ ಸೇರಿ ಶೇ. 24 ಹಣವನ್ನು ಮೀಸಲಿಡಬೇಕಿದೆ. ಆದರೆ, ಕಳೆದ ವರ್ಷ ಈ ಸಮುದಾಯದ ಏಳಿಗೆಗಾಗಿ ಮೀಸಲಿಟ್ಟ ಸುಮಾರು 11 ಸಾವಿರ ಕೋಟಿ ಮೊತ್ತವನ್ನು ಬೇರೆ ಬೇರೆ ಕಡೆ ವರ್ಗಾಯಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅವರಿಗೆ ಅನ್ಯಾಯ ಮಾಡಿದೆ. ಈ ವರ್ಷ 14 ಸಾವಿರ ಕೋಟಿಯನ್ನು ಬೇರೆಡೆ ವರ್ಗಾವಣೆ ಮಾಡಿದ್ದಾರೆ. 2 ವರ್ಷಗಳಲ್ಲಿ ದಲಿತರ ಹಣ 25 ಸಾವಿರ ಕೋಟಿಯನ್ನು ದುರ್ಬಳಕೆ ಮಾಡಿದ್ದಾರೆ ಎಂದು ಶ್ರೀರಾಮುಲು ದೂರಿದರು.
ಮತ್ತೊಂದೆಡೆ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಮಾತನಾಡಿ, ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣ ನಡೆದಿದ್ದು, ನಿಗಮದ ಅಧ್ಯಕ್ಷ ಬಸವರಾಜ ದದ್ದಲ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ. ಈ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಬಿಜೆಪಿ ಎಸ್‍ಟಿ ಮೋರ್ಚಾವು ರಾಜ್ಯಾದ್ಯಂತ ಇದೇ 18ರಂದು ಪೂರ್ವಭಾವಿ ಸಭೆಗಳನ್ನು ನಡೆಸಲಿದೆ. ಇದೇ ತಿಂಗಳ 28 ರಂದು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಉಗ್ರವಾದ ಹೋರಾಟ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ: ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಬಗ್ಗೆ ಹೋರಾಟ ಮಾಡುವ ಸಂಬಂಧ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ಪ್ರೀತಮ್ ಗೌಡ, ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ್, ಶ್ರೀಮತಿ ಹೇಮಲತಾ ನಾಯಕ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ: ಎಷ್ಟೇ ಸಚಿವ ಸ್ಥಾನ ನೀಡಿದರೂ, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜನ ಬೆಂಬಲ ನೀಡಲ್ಲ: ಸಿದ್ದರಾಮಯ್ಯ - CM Siddaramaiah