ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿಯಾಗಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಪಾಟೀಲ್, "ಸಮಾವೇಶದ ಮೂಲಕ 10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಬರುವುದು ಖಾತ್ರಿಯಾಗಿದೆ" ಎಂದರು.
"ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ ಕ್ಲಸ್ಟರ್ಸ್ ಸ್ಥಾಪಿಸಲಾಗುವುದು" ಎಂದು ಸಚಿವರು ತಿಳಿಸಿದರು.
ಸಾಧಕ ಕಂಪೆನಿಗಳಿಗೆ ಪುರಸ್ಕಾರ: "ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ. ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ/ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳು ಇರಲಿವೆ. ಈ ಕಾರ್ಯಕ್ರಮ ಫೆ.12ರ ಸಂಜೆ ನಡೆಯಲಿದೆ" ಎಂದು ಅವರು ಹೇಳಿದರು.
"ತಮ್ಮ ಉದ್ಯಮಗಳಿಗೆ ಒಂದು ಬಾರಿಯ ಗರಿಷ್ಠ ಬಂಡವಾಳ ಹೂಡಿಕೆ ಮಾಡಿರುವ ಕಂಪೆನಿಗಳು ಮತ್ತು ಜಾಗತಿಕ ಮಟ್ಟದ ಸಂಶೋಧನೆ ಹಾಗೂ ಅಭಿವೃದ್ಧಿಗೆ (ಆರ್ ಮತ್ತು ಡಿ) ಆದ್ಯತೆ ನೀಡಿರುವ ಉದ್ದಿಮೆಗಳನ್ನೂ ವಿಶೇಷವಾಗಿ ಪರಿಗಣಿಸಿ, ಪುರಸ್ಕಾರ ನೀಡಲಾಗುವುದು. ಹಾಗೆಯೇ, ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ 35ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಸ್ತರದ ಕೈಗಾರಿಕೆಗಳು, ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳಾ ಉದ್ಯಮಿಗಳು, ವಲಯವಾರು ಕೈಗಾರಿಕಾ ಉತ್ಕೃಷ್ಟತೆ ಸಾಧಿಸಿರುವ ಉದ್ಯಮಗಳಿಗೆ ಫೆ.13ರ ಸಂಜೆ ಪ್ರಶಸ್ತಿ ಪುರಸ್ಕಾರ ಕೊಡಲಾಗುವುದು" ಎಂದು ತಿಳಿಸಿದರು.
"ವೆಂಚುರೈಸ್ ಉಪಕ್ರಮದಡಿ ಒಟ್ಟು 3 ಲಕ್ಷ ಡಾಲರ್ ಮೌಲ್ಯದ 9 ಬಹುಮಾನಗಳನ್ನು ಪ್ರದಾನ ಮಾಡಲಾಗುವುದು. ಇದರಲ್ಲಿ ಮೊದಲ ಮೂರು ಸ್ಥಾನಗಳಿಗೆ ಕ್ರಮವಾಗಿ 50 ಸಾವಿರ ಡಾಲರ್, 30 ಸಾವಿರ ಡಾಲರ್ ಮತ್ತು 20 ಸಾವಿರ ಡಾಲರ್ ನಗದು ಪುರಸ್ಕಾರವಿದೆ" ಎಂದು ಸಚಿವರು ಮಾಹಿತಿ ನೀಡಿದರು.
ಕ್ವೀನ್ ಸಿಟಿ ಒಡಂಬಡಿಕೆಗಳು: "ಸಮಾವೇಶದಲ್ಲಿ ಮಹತ್ವಾಕಾಂಕ್ಷಿ ಕ್ವೀನ್ ಸಿಟಿ ಯೋಜನೆ ಸಂಬಂಧ ದೇಶ-ವಿದೇಶದ ಕೆಲವು ವಿಶ್ವವಿದ್ಯಾಲಯಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಆರ್ಥಿಕ ಬೆಳವಣಿಗೆ ಕುರಿತು ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಲಾಜಿಸ್ಟಿಕ್ಸ್ ವಲಯದಲ್ಲಿ ನಡೆಯುತ್ತಿರುವ ಆವಿಷ್ಕಾರಗಳನ್ನು ಕುರಿತು ವೋಲ್ವೊ ಸಮೂಹದ ಮುಖ್ಯಸ್ಥ ಮಾರ್ಟಿನ್ ಲುಂಡ್ ಸ್ಟೆಡ್, ಸಂದೀಪ್ ದೇಶಮುಖ್ ಮತ್ತು ಚಾಣಕ್ಯ ಹೃದಯ, ಯುವ ಸಂಶೋಧಕರನ್ನು ಕುರಿತು ಝೆರೋದಾ ಸಂಸ್ಥಾಪಕ ನಿಖಿಲ್ ಕಾಮತ್ ಅವರು ಉದ್ಯಮಿಗಳಾದ ಪಾರ್ಥ ಜಿಂದಾಲ್ ಹಾಗೂ ಸುಝಾನಾ ಮುತ್ತೂಟ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ" ಎಂದು ಪಾಟೀಲ ವಿವರಿಸಿದರು.
"ಹಿಂದಿನ ಸಲದ ಸಮಾವೇಶಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಇವುಗಳಲ್ಲಿ ಗೂಗಲ್ ಎಕ್ಸ್ ಸಂಸ್ಥಾಪಕ ಸೆಬಾಸ್ಟಿಯನ್ ತ್ರನ್, ಲ್ಯಾಮ್ ರೀಸರ್ಚ್ ಮುಖ್ಯಸ್ಥ ಪ್ಯಾಟ್ರಿಕ್ ಲಾರ್ಡ್, ಜನರಲ್ ಅಟಾಮಿಕ್ಸ್ ಗ್ಲೋಬಲ್ ಕಾರ್ಪೊರೇಷನ್ ಸಿಇಒ ವಿವೇಕ್ ಲಾಲ್, ಟಿವಿಎಸ್ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು, ಬೋಯಿಂಗ್ ಕಂಪನಿಯ ಉನ್ನತಾಧಿಕಾರಿ ರಾಬ್ ಬಾಯ್ಡ್, ನಥಿಂಗ್ ಕಂಪನಿಯ ಸಹ ಸಂಸ್ಥಾಪಕ ಅಕಿಸ್ ಇವ್ಯಾಂಜಿಲೈಡಿಸ್, ಗ್ರೀಸ್ ದೇಶದ ಮಾಜಿ ಪ್ರಧಾನಿ ಜಾರ್ಜ್ ಪೆಪೆಂಡ್ರಿಯೊ ಮುಂತಾದವರು ಮಾತನಾಡಲಿದ್ದಾರೆ" ಎಂದು ತಿಳಿಸಿದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಫೆಬ್ರವರಿ 11 ರಿಂದ 14ರ ವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಸಚಿವ ಎಂ ಬಿ ಪಾಟೀಲ್