ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ಘೋಷಣೆಯಾಗುತ್ತಲೆ, ಯಲಹಂಕದಲ್ಲಿ ಬಿಜೆಪಿ ಕಾರ್ಯಕರ್ತರ ಅಕ್ರೋಶ ಭುಗಿಲೆದ್ದಿದೆ. ಕಾರ್ಯಕರ್ತರು ಗೋ ಬ್ಯಾಕ್ ಸುಧಾಕರ್ ಅಭಿಯಾನ ಆರಂಭಿಸಿದ್ದಾರೆ. ಸ್ವಪಕ್ಷದವರೇ ಹಾಲಿ ಅಭ್ಯರ್ಥಿ ವಿರುದ್ಧ ಘೋಷಣೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಹಳೇ ಯಲಹಂಕದ ಕೆಂಪೇಗೌಡ ಪ್ರತಿಮೆ ಬಳಿ ಗೋ ಬ್ಯಾಕ್ ಸುಧಾಕರ್ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ನಡೆಸಿದರು. ರಸ್ತೆಯಲ್ಲಿ ಟೈರ್ಗೆ ಬೆಂಕಿ ಇಡುವ ಮೂಲಕ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ವಿವಿಧ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಅಧ್ಯಕ್ಷರು ಭಾಗವಹಿಸಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಯಲಹಂಕ ಕ್ಷೇತ್ರದ ಶಾಸಕರಾದ ಎಸ್.ಆರ್ ವಿಶ್ವನಾಥ್ ಅವರ ಮಗ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ಪ್ರಯತ್ನಿಸಿದರು. ಅಂತಿಮವಾಗಿ ಹೈಕಮಾಂಡ್ ಸುಧಾಕರ್ ಅವರಿಗೆ ಟಿಕೆಟ್ ನೀಡಿದೆ. ಇದು ಯಲಹಂಕ ಕ್ಷೇತ್ರದ ಕಾರ್ಯಕರ್ತರ ಅಕ್ರೋಶಕ್ಕೆ ಕಾರಣವಾಗಿದೆ.
ಪ್ರತಿಭಟನೆಗಿಳಿದ ಕಾರ್ಯಕರ್ತರು, ಸುಧಾಕರ್ ಯಲಹಂಕದಲ್ಲಿ ಪ್ರಚಾರಕ್ಕೆ ಬಂದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆಯನ್ನ ನೀಡಿದ್ದಾರೆ. ಅಲೋಕ್ ವಿಶ್ವನಾಥ್ ಅವರನ್ನು ಬಿಜೆಪಿ ಕಡೆಗಣಿಸಿ ಅಭ್ಯರ್ಥಿ ಘೋಷಣೆ ಮಾಡಿದೆ. ನೋಟಾಗೆ ಮತ ಚಲಾವಣೆ ಮಾಡ್ತೇವೆ ಹೊರತು, ಸುಧಾಕರ್ಗೆ ಮತ ಹಾಕೋದಿಲ್ಲ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಮಾಜಿ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಡತನಮಲೆ ಸತೀಶ್, ಮಾಜಿ ಬಿಬಿಎಂಪಿ ಸದಸ್ಯರು, ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ: 'ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು' ಎಂದ ತಂಗಡಗಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು - BJP Complaint