ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ನಡೆದ ತುಮಕೂರು ಬಂದ್ ಭಾರಿ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ನಂತರ ತುಮಕೂರು ಬಂದ್ ಬೆಂಬಲಿಸಿ ಬಹುತೇಕ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇನ್ನುಳಿದಂತೆ ಬ್ಯಾಂಕ್ಗಳು ಹಾಗೂ ಆಸ್ಪತ್ರೆಗಳು ತೆರೆದಿದ್ದವು. ಬೆಳಗ್ಗೆ ಸುಮಾರು 10 ಗಂಟೆಗೆ ನಗರದ ಟೌನ್ ಹಾಲ್ ಬಳಿ ಜಮಾಯಿಸಿದ ಹೋರಾಟಗಾರರು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದ್ದ ಬಂದ್ಗೆ ರೈತ ಸಂಘಟನೆಗಳು ಹಾಗೂ ವಿವಿಧ ಮಠಗಳ ಮಠಾಧೀಶರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಹೋರಾಟಕ್ಕೆ ವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದವು.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, "ಜಿಲ್ಲೆಯಾದ್ಯಂತ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ.
ಜನರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಲು ಅವಕಾಶ ಇಲ್ಲದಂತೆ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದರು.
ಇನ್ನು, ಪ್ರತಿಭಟನಾಕಾರರು ತುಮಕೂರು ನಗರದ ಟೌನ್ ಹಾಲ್ ವೃತದಿಂದ ಎಂಜಿ ರಸ್ತೆ ಮೂಲಕ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಧರಣಿಯಲ್ಲಿ ಬಾಳೆಹೊನ್ನೂರು ಶಾಖ ಮಠದ ಶ್ರೀ ವೀರಭದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಹೋರಾಟ ಸಮಿತಿ ಸಂಚಾಲಕ ಸೊಗಡು ಶಿವಣ್ಣ, ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಧರಣಿಯಲ್ಲಿ ಪಾಲ್ಗೊಂಡಿದ್ದವು.
ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಪ್ರತಿ ಲೀಟರ್ಗೆ 2 ರೂ. ಹೆಚ್ಚಳ! - MILK PRICE HIKE