ಬೆಂಗಳೂರು: ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ, ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಇವುಗಳ ತಯಾರಿಕೆಯಲ್ಲಿ ಕೃತಕ ಬಣ್ಣ ಬೆರೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಆರೋಗ್ಯದ ಮೇಲೆ ದುಷ್ಪರಿಣಾಮ ಹಿನ್ನೆಲೆ ಕ್ರಮ; ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗೆ ಕೃತಕ ಬಣ್ಣ ಬೆರಸುವಿಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ. ಹೀಗೆ ಪರೀಕ್ಷೆಗೊಳಪಡಿಸಿದ ಮಾದರಿಗಳಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದು ಅಸುರಕ್ಷಿತ ಅನ್ನೋದು ಪರೀಕ್ಷಾ ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ರ ನಿಯಮ 3(1) (zz) (viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.
ಕಬಾಬ್ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006, 223 (1) (zz) (viii) 2 ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಮಗಳು 2011ರ ನಿಯಮ 16.0 ಗಳಡಿ ಅವಕಾಶ ಇಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಿದೆ.
ಆದೇಶ ಉಲ್ಲಘಿಸಿದ್ರೆ ಭಾರಿ ದಂಡ ಮತ್ತು ಶಿಕ್ಷೆ; ಈ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ. ಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - LKG UKG IN ANGANWADIS