ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು. ಹಾಗೂ ಇನ್ನು ಮುಂದೆ ಇವೆರಡು ಬ್ಯಾಂಕ್ಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆ ಮಾಡಬಾರದೆಂಬ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.
ಮೇಲೆ ಉಲ್ಲೇಖಿತ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ಸೂಚಿಸಲಾಗಿತ್ತು.
ಎಸ್ಬಿಐ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ವಿನೋದ್ ಜೈಸ್ವಾಲ್ 15 ದಿನಗಳ ಕಾಲಾವಕಾಶ ಕೋರಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಮುಂದುವರೆದು, ಆಗಸ್ಟ್ 16ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಆರ್ಥಿಕ ಇಲಾಖೆ ) ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ, ಕೆಎಸ್ಪಿಸಿಬಿ ಸಂಸ್ಥೆಯು ನಿಶ್ಚಿತ ಠೇವಣಿಯಲ್ಲಿ ಹೂಡಿರುವ ಹಣವನ್ನು ಮರುಪಾವತಿಸುವ ವಿಷಯವನ್ನು ಇತ್ಯರ್ಥಗೊಳಿಸಲು ಮನವಿ ಸಲ್ಲಿಸಿದ್ದರು.
ಅದೇ ರೀತಿ, ಪಂಜಾಬ್ ನ್ಯಾಷನಲ್ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕ ದೀಪಕ್ ಕುಮಾರ್ ಶ್ರೀವಾತ್ಸವ 15 ದಿನಗಳ ಕಾಲಾವಕಾಶವನ್ನು ಕೋರಿ ಮನವಿ ಪತ್ರ ನೀಡಿದ್ದರು. ಆಗಸ್ಟ್ 16ರಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಕಾರಾತ್ಮಕವಾಗಿ ಸ್ಪಂದಿಸಿ, ಕೆಐಎಡಿಬಿ ಸಂಸ್ಥೆಯ ನಿಶ್ಚಿತ ಠೇವಣಿ ಮರುಪಾವತಿಸಲು ಸಮಯಾವಕಾಶ ಕೋರಿದ್ದರು.
ಮುಖ್ಯಮಂತ್ರಿ ಅವರಿಂದ ಅನುಮೋದಿಸಿ, ಎಸ್ಬಿಐ ಮತ್ತು ಪಿಎನ್ಬಿ ಬ್ಯಾಂಕ್ಗಳ ಕೋರಿಕೆಯ ಹಿನ್ನೆಲೆ ಆಗಸ್ಟ್ 12ರಂದು ಹೊರಡಿಸಲಾದ ಸುತ್ತೋಲೆಯನ್ನು 15 ದಿನಗಳವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸರ್ಕಾರ ಮತ್ತೊಂದು ಸುತ್ತೋಲೆ ಬಿಡುಗಡೆ ಮಾಡಿದೆ.
ಓದಿ: ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯ: 5 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert