ಬೆಂಗಳೂರು: ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣ ಪತ್ರ ತೆಗೆದುಕೊಂಡು ಬಳಿಕ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ನೋಟಿಸ್ ಜಾರಿಗೊಳಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪ ಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪ ಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪ ಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ, ಯಾದಗಿರಿಯ ರಾಜ್ಯ ಎಸ್‌ಸಿ, ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು. ಅಲ್ಲದೆ, ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡವರಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ನ್ಯಾಯಾಲಯ ಆದೇಶಿಸಿತ್ತು.
ಅದರಂತೆ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಸೂಚನೆ ಕಳಿಸಲಾಗಿತ್ತು. ಆ ಪ್ರಕಾರ ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣ ತೆಗೆದುಕೊಂಡು ನಂತರ ಪರಿವಾರ ನಾಯಕ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ 30 ಮಂದಿಗೆ ಜಿಲ್ಲಾಧಿಕಾರಿಗಳು ನೋಟಿಸ್ ಕೊಟ್ಟು, ಜಾತಿ ಪ್ರಮಾಣಪತ್ರ ರದ್ದುಪಡಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಈ ವೇಳೆ ನ್ಯಾಯಪೀಠ, ಅರ್ಜಿಯಲ್ಲಿ ಉಲ್ಲೇಖಿಸಲಾದ ಪ್ರಕರಣಗಳಷ್ಟೇ ಅಲ್ಲದೆ, ಈ ರೀತಿ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಇತರರ ವಿರುದ್ದವೂ ಕ್ರಮ ಜರುಗಿಸಲು ನ್ಯಾಯಾಲಯ ಆದೇಶಿಸಿತ್ತು. ಅದರ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ಮೊದಲಿಗೆ ಅರ್ಜಿಯಲ್ಲಿ ಉಲ್ಲೇಖಿಸಲಾದ ಪ್ರಕರಣಗಳಿಗೆ ನೋಟಿಸ್ ಕೊಡಲಾಗಿದೆ. ಉಳಿದವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು. ಸದ್ಯ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಸ್ವಲ್ಪ ಕಾಲಾವಕಾಶಬೇಕು ಎಂದು ಕೋರಿದರು.
ಈ ಮಧ್ಯೆ ಅರ್ಜಿದಾರರ ಪರ ವಕೀಲರು, ಅರ್ಜಿಯಲ್ಲಿ ಉಲ್ಲೇಖಿಸಿದ್ದು ಕೇವಲ ಉದಾಹರಣೆಗಳಷ್ಟೇ. ಅಂತಹ ಸಾವಿರಾರು ಪ್ರಕರಣಗಳಿಗೆ 6ರಿಂದ 7 ಸಾವಿರ ಮಂದಿ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಆ ಮಾಹಿತಿಯನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಕಳಿಸಿಕೊಡಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ಆ ಮಾಹಿತಿ ನಮಗೆ ಕೊಟ್ಟರೆ, ಅದರ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಎಲ್ಲರ ವಿರುದ್ಧ ಹಾಗೂ ಅರ್ಜಿದಾರರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದುಕೊಂಡಿರುವ ಮಾಹಿತಿ ಆಧರಿಸಿ, ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡವರ ವಿರುದ್ಧ 3 ವಾರಗಳಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.