ಮೈಸೂರು/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ. ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳು 10 ಸಾವಿರ ರೂ ನೀಡಲು ನಿರ್ಧರಿಸಿದ್ದೇವೆ. ಇದರಿಂದಾಗಿ ಆಶಾ ಕಾರ್ಯಕರ್ತರು ಮುಷ್ಕರ ವಾಪಸ್ ಪಡೆಯುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ (ಇನ್ಸೆಂಟಿವ್ಸ್) ಸೇರಿದಂತೆ ಪ್ರತಿ ತಿಂಗಳು 10,000 ರೂ. ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಮುಷ್ಕರ ಕೈಬಿಡಲು ಆಶಾ ಕಾರ್ಯಕರ್ತರು ಸಮ್ಮತಿಸಿದ್ದಾರೆ. ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದು ಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು. ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನಾತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ಅವರು ಹೇಳಿದ್ದರು. ಅನ್ಯಾಯದ ವಿರುದ್ಧ ದನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕೈಗೆ ಕಾನೂನು ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ತಿಳಿಸಿದರು.
ಅಂಬೇಡ್ಕರ್ ಅವರ ಕುರಿತ ಕಾಂಗ್ರೆಸ್ ಬದ್ಧತೆ ತೋರ್ಪಡಿಸುವ ಅಗತ್ಯವಿಲ್ಲ: ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ. ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದರು.
ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತ ವಿರೋಧಿ ಸರ್ಕಾರವಿದೆ: ನವದೆಹಲಿಯಲ್ಲಿ ಎಂಎಸ್ಪಿ ಬೇಡಿಕೆ ಸಂಬಂಧ ಬಹಳ ದಿನಗಳಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತ ವಿರೋಧಿ ಸರ್ಕಾರವಾಗಿದೆ ಎಂದು ಕಿಡಿಕಾರಿದರು.
ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ: ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.
ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಕುರಿತು ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ಅನ್ನು ತಾವು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಢೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಹೋರಾಟ ಮಾಡುವುದು ಸಂವಿಧಾನ ಬದ್ಧಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು
ಇದನ್ನೂ ಓದಿ: 80ರ ವೃದ್ಧ ದಂಪತಿಗೂ ನೆರವಾದ ನರೇಗಾ; ಖಾನಾಪುರದ ಅಜ್ಜ-ಅಜ್ಜಿಯ ಸ್ವಾವಲಂಬಿ ಮಾದರಿ ಬದುಕು
ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ; ನಿಗದಿತ ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ