ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ದಾಖಲಾಗಿದ್ದ ಎಫ್ಐಆರ್ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ನಿರಾಳರಾಗಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಇದೀಗ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದಾರೆ.
ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್ ಡಿ ರೇವಣ್ಣ - HD Revanna Case
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಕೆ.ಆರ್.ನಗರ ಪೊಲೀಸ್ ಠಾಣೆಯ ಎಫ್ಐಆರ್ ಅನ್ನು ಓದಿದರು. ಅಲ್ಲದೆ, ಈ ಎಫ್ಐಆರ್ನಲ್ಲಿ ಜಾಮೀನುರಹಿತ ಸೆಕ್ಷನ್ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನ ಜಾಮೀನು ರಹಿತವಾಗಿವೆ. ಆದರೆ, ದೂರಿನಲ್ಲಿ ನಾಪತ್ತೆಯಾಗಿರುವ ಮಹಿಳೆಯ ಹೆಸರನ್ನು ಉಲ್ಲೇಖಿಸಿಲ್ಲ. ಈ ಪ್ರಕರಣದಲ್ಲಿ ಬಂಧನ ಭೀತಿಯಿದೆ. ಅಲ್ಲದೆ, ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಶನಿವಾರ ವಿಚಾರಣೆಗೆ ಹಾಜರಾಗಲು ಅರ್ಜಿದಾರರು ಸಿದ್ಧರಿದ್ದಾರೆ. ಆದ್ದರಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು'' ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಎಸ್ಐಟಿ ಪರ ಎಸ್ಪಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.
ಇದನ್ನೂ ಓದಿ: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್: ಅಪಹರಣದ ದೂರು ದಾಖಲಿಸಿದ ಮಹಿಳೆಯೊಬ್ಬರ ಪುತ್ರ - Hassan Pen Drive Case