ಬೆಂಗಳೂರು: ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಅಲಿಯಾಸ್ ಸೈಕೋ ಕಿರಣ್ (21) ಬಂಧಿತ ಆರೋಪಿ. ಪ್ರೊಕ್ಲಮೇಷನ್ ಹಾಗೂ ವಾರೆಂಟ್‌ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಶುಕ್ರವಾರ ಹೆಚ್ಎಎಲ್ ಠಾಣೆ ಪೊಲೀಸರ ತಂಡ ತೆರಳಿತ್ತು. ಪೊಲೀಸರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಘಟನೆಯಲ್ಲಿ ಎಚ್ಎಎಲ್ ಠಾಣೆಯ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿದ್ದವು ವರದಿಯಾಗಿದೆ.
ಬಳಿಕ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಬಳಿಯಿದ್ದ ಆರೋಪಿಯನ್ನು ಬಂಧಿಸಲು ಹೆಚ್ಎಎಲ್ ಠಾಣೆ ಪೊಲೀಸರು ತೆರಳಿದ್ದರು. ಆ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಲು ಪ್ರಯತ್ನಿಸಿದಾಗ, ಹೆಚ್ಎಎಲ್ ಠಾಣೆ ಇನ್ಸ್‌ಪೆಕ್ಟರ್ ಅಜರುದ್ದೀನ್ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದೆವು. ಆದ್ರೆ ಆತ ಮತ್ತೆ ನಮ್ಮ ಮೇಲೆ ಹಲ್ಲೆಗೆ ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಹೆಚ್ಎಎಲ್ ಹಾಗೂ ಜೀವನ್ ಭೀಮಾನಗರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಾ. ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ರೂಮ್ಗೆ ನುಗ್ಗಿ ವಿದ್ಯಾರ್ಥಿಗಳನ್ನು ಬೆದರಿಸಿ ಸುಲಿಗೆ: ಗೃಹರಕ್ಷಕ ದಳದ ಸಿಬ್ಬಂದಿ ಬಂಧನ