ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋ ಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್ 2025" ಮಸೂದೆ ಕುರಿತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕಾನೂನು ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅದರ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದರು.
ಫೈನಾನ್ಸ್‌ಗಳ ಕಿರುಕುಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟಲು ತ್ವರಿತವಾಗಿ ಕಾನೂನು ತರಬೇಕು ಎಂದು ಮುಖ್ಯಂಮತ್ರಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಿಎಂ ಜತೆ ಚರ್ಚಿಸಿ ಕ್ಯಾಬಿನೆಟ್ ಮುಂದೆ ವಿಷಯ ಮಂಡನೆ: ಸಮಾಜದಲ್ಲಿ ಕೆಳಸ್ತರದ ಜನರು ಕಿರುಸಾಲ ತೆಗೆದುಕೊಳ್ಳುತ್ತಾರೆ. ಸಾಲ ವಸೂಲಿ ಮಾಡಲು ಅಮಾನವೀಯವಾಗಿ ವರ್ತಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳನ್ನು ನಿಲ್ಲಿಸಬೇಕಿದೆ. ಜನ ಊರು ಬಿಡುತ್ತಿರುವುದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಹೀಗಾಗಿ ಮಸೂದೆ ತರಲು ಬಜೆಟ್ ಅಧಿವೇಶನದವರೆಗೂ ಕಾಯಲು ಆಗುವುದಿಲ್ಲ. ಸಭೆಯ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಕ್ಯಾಬಿನೆಟ್ ಮುಂದೆ ತರಲಾಗುವುದು ಎಂದು ಅವರು ಹೇಳಿದರು.
ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ: ಮೈಕ್ರೋ ಫೈನಾನ್ಸ್‌ಗಳ ಅಮಾನುಷ ವರ್ತನೆಯ ಘಟನೆಗಳು ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಜನರೊಂದಿಗೆ ಒತ್ತಾಯ ಪೂರ್ವಕವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಒಳ್ಳೆಯದಲ್ಲ ಎಂದರು.
ಸಾಲ ವಸೂಲಾತಿ ಪ್ರಮಾಣ ಕಡಿಮೆ ಇರಬಹುದು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲಧಿಕಾರಿಗಳ ಒತ್ತಡ ಇರಬಹುದು. ಆದರೂ ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಸಾಲ ಪಡೆಯುವುದು ಮತ್ತು ನೀಡುವುದರ ಕುರಿತು ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಸಾಲ ಇಷ್ಟೇ ಕೊಡಬೇಕು ಎಂಬುದನ್ನು ಹೇಳುತ್ತಿಲ್ಲ. ಆದರೆ, ಜನರಿಂದ ಸಾಲ ವಸೂಲಿ ಮಾಡುವ ಕ್ರಮ ಸರಿಯಾಗಿಲ್ಲ ಎಂದರು.
ಇದನ್ನೂ ಓದಿ: ಸಬ್ಸಿಡಿ ನೆಪದಲ್ಲಿ ಮಧ್ಯವರ್ತಿಯಿಂದ ಮಹಿಳೆಯರಿಗೆ ಮೋಸ ಆರೋಪ : ಊರು ಬಿಡುತ್ತಿರುವ ಗಜಮಿನಾಳ ಜನ - CHEATING BY MIDDLEMAN