ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿರುವ ಬೊಮ್ಮಾಯಿ, ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯ ಪತಾಕೆ ಹಾರಿಸಿದ್ದಾರೆ. ಇವರಿಗೆ ಎದುರಾಳಿಯಾಗಿ ಅಖಾಡಕ್ಕೆ ಇಳಿದಿದ್ದ ಕಾಂಗ್ರೆಸ್ ಪಕ್ಷದಿಂದ ಆನಂದಸ್ವಾಮಿ ಗಡ್ಡದೇವರಮಠ ಸೋಲು ಅನುಭವಿಸಿದ್ದಾರೆ.
ಬಿಜೆಪಿ ಭದ್ರಕೋಟೆ: 2008ರಲ್ಲಿ ನಡೆದ ಕ್ಷೇತ್ರ ಮರುವಿಂಗಡಣೆಯ ಪ್ರಕ್ರಿಯೆಯ ಫಲವಾಗಿ ಸೃಷ್ಟಿಯಾದ ಹೊಸ ಕ್ಷೇತ್ರ. ಅದರ ಮರುವರ್ಷವೇ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮೊದಲು ಜಯ ಗಳಿಸಿದ್ದು ಶಿವಕುಮಾರ್ ಚನ್ನಬಸಪ್ಪ ಉದಾಸಿ. ಆಗಿನಿಂದಲೂ ಇದು ಬಿಜೆಪಿಯ ಭದ್ರಕೋಟೆಯೇ ಆಗಿದೆ. 2014ರಲ್ಲಿ ಹಾಗೂ 2019ರ ಚುನಾವಣೆಗಳಲ್ಲಿ ಪುನಃ ಉದಾಸಿಯವರೇ ಗೆದ್ದು ಬಂದಿದ್ದರು. ಈ ಬಾರಿ ಬಿಜೆಪಿಯು ಈ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿತ್ತು.
ಮತದಾನ: ಈ ಕ್ಷೇತ್ರದ ಮತದಾರರು ಮತದಾನಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. 2019ರಲ್ಲಿ ಶೇ. 74.01ರಷ್ಟು ಮತದಾನ ಆಗಿತ್ತು. 2024ರಲ್ಲಿ ಅದಕ್ಕಿಂತಲೂ ಹೆಚ್ಚು ಮತದಾನ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಇಲ್ಲಿ ಶೇ. 76.78. ಮತದಾನ ದಾಖಲಾಗಿತ್ತು.
ಓದಿ: ಲೋಕಸಮರ: ಯಾರಿಂದ ಯಾರಿಗೆ ಹೊಡೆತ? ರಾಜ್ಯದ 28 ಕ್ಷೇತ್ರಗಳ ಮಾಹಿತಿ - Lok Sabha Election