ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಮನೆಗಳ ಖಾತಾ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗುತ್ತಿದೆ ಎಂಬ ಆತಂಕದಿಂದ ಉದ್ರಿಕ್ತರು ಗಲಾಟೆ ನಡೆಸಿದ್ದರು. ಉದ್ರಿಕ್ತ ಗುಂಪು ಇನ್ನೊಂದು ಗುಂಪಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ, ಹಲ್ಲೆ ನಡೆಸಿತ್ತು. ಗಲಾಟೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸವಣೂರು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 32 ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಡಕೋಳ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: ಯಾರ ಆಸ್ತಿಯನ್ನು ಯಾರು ತೆಗೆದುಕೊಳ್ಳಲು ಸಾಧ್ಯವಿಲ್ಲ: ಜೋಶಿಗೆ ಜಮೀರ್ ತಿರುಗೇಟು